ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರವು ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಭುವನೇಶ್ವರಿ ವೃತ್ತದಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಗುರುವಾರ ಗೋವುಗಳ ಪೂಜೆ ಕೈಗೊಳ್ಳಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ ಮಾತನಾಡಿ, ಹಲವು ಶತಮಾನಗಳಿಂದಲೂ ಭಾರತೀಯ ಸಂಸ್ಕೃತಿ, ಸಂಪ್ರದಾಯಕ್ಕೆ ಪ್ರತೀಕವಾದ ಗೋವು ಮಾತೆಯನ್ನು ಪೂಜಿಸಿಕೊಂಡು ಬರಲಾಗುತ್ತಿದೆ. ಇದಕ್ಕೆ ಅನುಗುಣವಾಗಿ ರೈತರು ಜಾನುವಾರುಗಳೊಂದಿಗೆ ಕುಟುಂಬದ ಸದಸ್ಯರ ಮಾದರಿಯಲ್ಲಿ ಬೆರೆಯುವುದು ವಾಡಿಕೆ. ಇದರ ನಡುವೆ ವಿಶಿಷ್ಟ ಸ್ಥಾನಮಾನ ಹೊಂದಿರುವ ಗೋವುಗಳ ಹತ್ಯೆ ಸರಿ ಇಲ್ಲ ಎಂದರು.
ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯ ಬಹುಜನರ ಬೇಡಿಕೆಯನ್ನು ಸರ್ಕಾರ ಈಡೇರಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ಕಾರ್ಯದರ್ಶಿ ಅಶೋಕ್, ನಗರ ಅಧ್ಯಕ್ಷ ಶ್ರೀನಿವಾಸ್, ಗ್ರಾಮೀಣ ಅಧ್ಯಕ್ಷ ಕೆ.ಎಸ್.ಕೃಷ್ಣಾರೆಡ್ಡಿ, ಮುಖಂಡರಾದ ನರಸಪ್ಪ, ಲಕ್ಷ್ಮೀನಾರಾಯಣ ಗುಪ್ತ ಮತ್ತಿತರರು ಇದ್ದರು.