ಜಿಲ್ಲೆ

ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿ

ಬಳ್ಳಾರಿ : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಪ್ರಾಧಿಕಾರದ ಪದಾಧಿಕಾರಿಗಳು ಶ್ರಮಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಲಬುರಗಿ ವಿಭಾಗದ ಉಪಾಧ್ಯಕ್ಷ ಎಸ್.ಆರ್. ಮೆಹರೋಜ್ ಖಾನ್ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳ ಪರವಾಗಿ ರಾಜ್ಯಾದ್ಯಂತ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು, ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ವಿದ್ಯಾರ್ಥಿಗಳಿಗೆ ಗೃಹಿಣಿಯರಿಗೆ, ವಿದ್ಯುತ್ ಗ್ರಾಹಕರಿಗೆ ಹಾಗೂ ಯುವಕರಿಗೆ ಸೇರಿದಂತೆ ಸಮಾಜದ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತಿದೆ ಎಂದರು. ಕೆಲ ತಾಂತ್ರಿಕ ಲೋಪದೋಷದಿಂದ ಸಕಾಲಕ್ಕೆ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಲು ವಿಳಂಬವಾಗುತ್ತಿದೆಯೇ ಹೊರತು ಯಾವುದೇ ಕಾರಣಕ್ಕೂ ನಿಲ್ಲಿಸಲಾಗುವುದಿಲ್ಲ. ಯೋಜನೆಗಳ ಅನುಷ್ಠಾನಕ್ಕೆ ವಾರ್ಷಿಕ 53 ಸಾವಿರ ಕೋಟಿ ರೂ. ವಿನಿಯೋಗಿಸಲು ಅನುದಾನ ನಿಗದಿಪಡಿಸಲಾಗಿದೆ. ಜಿಲ್ಲಾದ್ಯಂತ 3,01,180 ಪಡಿತರ ಚೀಟಿದಾರರಿದ್ದು ಗೃಹಲಕ್ಷ್ಮಿ ಯೋಜನೆಯಡಿ 2,77,494 ನೋಂದಣಿಯಾಗಿವೆ. ಈ ಪೈಕಿ 601 ಕೋಟಿ ರೂ. ವೆಚ್ಚ ಭರಿಸಲಾಗಿದೆ. ಶಕ್ತಿ ಯೋಜನೆಯಡಿ 2.94 ಕೋಟಿ ಫಲಾನುಭವಿಗಳು ಪ್ರಯಾಣಿಸಿದ್ದು, 110 ಕೋಟಿ ರೂ. ವೆಚ್ಚವಾಗಿದೆ. 3,02,898 ಅರ್ಹ ವಿದ್ಯುತ್ ಬಳಕೆದಾರರಿದ್ದು ಗೃಹ ಜ್ಯೋತಿ ಯೋಜನೆಯಡಿ 2,74,775 ಗ್ರಾಹಕರು ನೋಂದಾಯಿಸಿಕೊಂಡಿದ್ದು, 1.20 ಕೋಟಿ ರೂ. ವೆಚ್ಚ ವ್ಯಯವಾಗಿದೆ. ಅನ್ನಭಾಗ್ಯ ಯೋಜನೆಯಡಿ 31 ಲಕ್ಷ ಫಲಾನುಭವಿಗಳಿಗೆ 175 ಕೋಟಿ ವೆಚ್ಚ ಭರಿಸಲಾಗಿದೆ. ಯುವನಿಧಿ ಯೋಜನೆಯಡಿ 5,863 ಫಲಾನುಭವಿಗಳಿಗೆ 1 ಕೋಟಿ 76 ಲಕ್ಷ ರೂ. ಭರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ , ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಿದಾನಂದಪ್ಪ ಮಾತನಾಡಿದರು