ಚಾಮರಾಜನಗರ: ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ವರದಾನವಾಗಿದೆ ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.
ತಾಲೂಕಿನ ಚಂದಕವಾಡಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಚಂದಕವಾಡಿ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶ ಸ್ವಾತಂತ್ರ್ಯಗೊಂಡು 75 ವರ್ಷಗಳಾಗಿದ್ದರೂ ಬಡತನ, ಹಸಿವು ಇನ್ನೂ ಇದೆ. ಇದನ್ನು ಮನಗಂಡಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಮೇಲೆತ್ತಲು ಹಾಗೂ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವಾಗಲು ಪಂಚ ಗ್ಯಾರಂಟಿ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮವು ಪಂಚ ಗ್ಯಾರಂಟಿ ಯೋಜನೆಗಳ ಪರಿಕಲ್ಪನೆಗೆ ಪ್ರೇರಣೆಯಾಗಿದೆ ಎಂದರೆ ತಪ್ಪಾಗಲಾರದು ಎಂದರು.
ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ ಯೋಜನೆಗಳನ್ನು ಜಾರಿಗೊಳಿಸಿದ್ದರು. ಪ್ರಸ್ತುತ ಸರ್ಕಾರದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. 20 ಅಂಶಗಳ ಕಾರ್ಯಕ್ರಮದಡಿ ವೃದ್ಧರಿಗೆ, ಅಂಗವಿಕಲರಿಗೆ ಪಿಂಚಣಿ ದೊರೆಯುತ್ತಿತ್ತು. ಆದರೆ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ವರ್ಗಗಳನ್ನು ತಲುಪುತ್ತಿವೆ. ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದ ಎಲ್ಲೆಡೆ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಮಹಿಳೆಯರು ಆರ್ಥಿಕವಾಗಿ ಮುಂಚೂಣಿಗೆ ಬರಲು ನೆರವಾಗಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ನೀಡಿದ ಚುನಾವಣಾ ಪೂರ್ವ ಭರವಸೆಯನ್ನು ನೀಡಿದ್ದರು. ಅವುಗಳನ್ನು ಈಡೇರಿಸುವ ಮೂಲಕ ಇಡೀ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನರ ಆಶೋತ್ತರಗಳಿಗೆ ಪೂರಕವಾಗಿ ಕೆಲಸ ಮಾಡಿದ್ದಾರೆ. ಯೋಜನೆಗಳ ಹಣ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ. ಮಹಿಳೆಯರು ಆರ್ಥಿಕವಾಗಿ ಸದೃಢರಾಗುತ್ತಿದ್ದಾರೆ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ನಲ್ಲೂರು ಸೋಮೇಶ್ವರ್ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಸಾಕಷ್ಟು ಅನುಕೂಲಗಳಾಗಿವೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವುದರ ಮೂಲಕ ಎಲ್ಲ ವರ್ಗದ ಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಚಾಮರಾಜನಗರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠರಾಜೇ ಅರಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಸಮಿತಿ ಸದಸ್ಯರಾದ ಮರಿಯಾಲದ ಹುಂಡಿಕುಮಾರ್, ಮಾದಾಪುರ ಕುಮಾರಸ್ವಾಮಿ, ಚಿನ್ನಸ್ವಾಮಿ, ರಾಜೇಶ್, ರಮೇಶ್, ಮಂಜುಳಾ, ರಾಜು, ಮಲ್ಲಿಕಾರ್ಜುನ, ಸುಕುಮಾರ್, ಗಣೇಶ್‌ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.