ಜಿಲ್ಲೆ

ಗ್ಯಾರಂಟಿ ಯೋಜನೆಯ ಹಣ ಬ್ಯಾಂಕ್ ಸಾಲಕ್ಕೆ ಮುರಿತ ಬೇಡ- ಕಲಾಪದಲ್ಲಿ ಶಾಸಕ ಬಸವಂತಪ್ಪ ಆಗ್ರಹ

ದಾವಣಗೆರೆ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ನಗದು ವರ್ಗಾವಣೆ ಸೌಲಭ್ಯದ ಮೂಲಕ ನೀಡುವ ಹಣವನ್ನು ಬ್ಯಾಂಕ್‌ಗಳು ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕ್‌ಗಳ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಒತ್ತಾಯಿಸಿದರು.

ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು, ರೈತ ಮಹಿಳೆಯರು ಸಹಕಾರಿ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಕ್ಕಳ ಶಿಕ್ಷಣಕ್ಕಾಗಿ 25 ಸಾವಿರ ರೂ. ನಿಂದ 1 ಲಕ್ಷದವರೆಗೂ ಸಾಲ ಮಾಡಿಕೊಂಡಿರುತ್ತಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಿದ್ದಂತೆ ಬ್ಯಾಂಕ್‌ನವರು ಸಾಲಕ್ಕೆ ವಜಾ ಮಾಡಿಕೊಳ್ಳುತ್ತಾರೆ. ಇದರಿಂದ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಬ್ಯಾಂಕ್‌ಗಳ ವ್ಯವಸ್ಥಾಪಕರಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿದರು.

ಇದಕ್ಕೆ ಸ್ಪಂದಿಸಿದ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಂಬಂಧಿಸಿದ ಸಚಿವರಿಗೆ ಸೂಚಿಸಿದರು.

ಗ್ರಾಮೀಣ ಪ್ರದೇಶಗಳ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದರಿಂದ ಯುವಕರು, ವಿದ್ಯಾರ್ಥಿಗಳು ಮದ್ಯ ವ್ಯಸನಿಗಳಾಗಿದ್ದಾರೆ. ಅನೇಕ ಕುಟುಂಬಗಳು ಮನೆ ಕಳೆದುಕೊಂಡು ಬೀದಿ ಪಾಲಾಗಿವೆ. ಗಂಡ ಹೆಂಡತಿ ನಡುವೆ ಜಗಳವಾಗಿ ಕೆಲವರ ದಾಂಪತ್ಯ ಸಂಬಂಧ ಮುರಿದು ಹೋಗಿವೆ.

ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಆದರೆ ಅಧಿಕಾರಿಗಳು ಪ್ರತಿ ತಿಂಗಳು ಅಂಗಡಿಯವರು ನೀಡುವ ಲಂಚದಾಸೆಗೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ಸರ್ಕಾರ ಗ್ರಾಮೀಣ ಪ್ರದೇಶದ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಶಾಸಕರು ಆಗ್ರಹಿಸಿದರು.

---