ಚಿತ್ರದುರ್ಗ: ಮಹಿಳೆಯರು ಅಬಲೆಯರಲ್ಲ, ಸಬಲೆಯರು ಎಂಬುದನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಬೀತು ಮಾಡಿದೆ ಎಂದು ತಹಸೀಲ್ದಾರ್ ಡಾ.ನಾಗವೇಣಿ ಹೇಳಿದರು.
ಬರಗೇರಮ್ಮ ಸಮುದಾಯ ಭವನದಲ್ಲಿ ಈಚೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಚಿತ್ರದುರ್ಗ ತಾಲೂಕು ಮಟ್ಟದ ಜ್ಞಾನವಿಕಾಸ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ತ್ರೀಯರಿಗೆ ಈ ಯೋಜನೆ ಅತ್ಯಂತ ಸಹಕಾರಿಯಾಗಿದೆ. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ತಾಲೂಕು ಯೋಜನಾಧಿಕಾರಿ ಬಿ.ಅಶೋಕ್ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡ ಮಹಿಳೆಯರಲ್ಲಿ ಸಾಕಷ್ಟು ಬದಲಾವಣೆ ಕಾಣಬಹುದು. ಕೇಂದ್ರದ ಮೂಲಕ ಯೋಜನೆ ಸದ್ಬಳಕೆ ಮಾಡಿಕೊಂಡು ಜೀವನದಲ್ಲಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿದ್ಯಾಲಯದ ರಾಜಯೋಗಿ ಅಕ್ಕ, ವಿವಿಧ ಸಂಘಟನೆ ಪದಾಧಿಕಾರಿಗಳಾದ ಮರುಳಾರಾಧ್ಯ, ಸಿ.ಬಿ.ನಾಗರಾಜ್, ಎಂ.ಜಿ.ಶಶಿಕಲಾ, ಮೂರ್ತಿ, ನಗರಸಭೆ ಸದಸ್ಯ ಶಶಿಧರ್, ಸಂತೋಷ್, ವಲಯ ಮೇಲ್ವಿಚಾರಕ ಶಿವಕುಮಾರ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಚಂದ್ರಮ್ಮ ಇತರರಿದ್ದರು.