ಸಿರಗುಪ್ಪ: ವಿದ್ಯಾರ್ಥಿಗಳನ್ನು ಸದೃಢವಾಗಿ ಸಿದ್ಧಗೊಳಿಸಲು ಗ್ರಾಮೀಣ ಭಾಗದಲ್ಲಿ ಕಬಡ್ಡಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕಬಡ್ಡಿ ಆಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ವ್ಯಾಯಾಮ ದೊರೆಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗುರಪ್ಪ ಹೇಳಿದರು.
64 ಹಳೇಕೋಟೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಇಒ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಬಡ್ಡಿ ಗ್ರಾಮೀಣ ಕ್ರೀಡೆಯಾಗಿದ್ದು, ಉಳಿಸಿ ಬೆಳೆಸಬೇಕು. ಕಬಡ್ಡಿ ರಾಷ್ಟ್ರೀಯತೆ ಮತ್ತು ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಕ್ರೀಡೆಯಲ್ಲಿ ಸೋಲು, ಗೆಲವು ಮುಖ್ಯವಲ್ಲ. ಕ್ರೀಡಾ ಸ್ಫೂರ್ತಿಯಿಂದ ಪಾಲ್ಗೊಳ್ಳುವುದು ಮುಖ್ಯ ಎಂದು ತಿಳಿಸಿದರು.
ಅ.14ರಂದು ಬಳ್ಳಾರಿಯಲ್ಲಿ ಆಯೋಜಿಸಿದ್ದ ಬಾಲಕರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಶಾಲೆ ಮತ್ತು ಗ್ರಾಮಕ್ಕೆ ಗೌರವ ತಂದಿದ್ದಾರೆ ಎಂದು ಮುಖ್ಯಶಿಕ್ಷಕ ಹನುಮಂತಪ್ಪ ತಿಳಿಸಿದರು.