ಮೂಡಲಗಿ: ಯುವಜನಾಂಗ ನಿರಾಸಕ್ತಿ ತೋರುತ್ತಿರುವುದರಿಂದ ಗ್ರಾಮೀಣ ಭಾಗದ ಕ್ರೀಡೆಗಳು ನಶಿಸುತ್ತಿವೆ ಎಂದು ದಿವಾಣಿ ಹಾಗೂ ಜೆ.ಎಂ.ಎಫ್ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ವಿಷಾದ ವ್ಯಕ್ತಪಡಿಸಿದರು.
ಪಟ್ಟಣದ ಲಕ್ಷ್ಮಣ ಅಡಿಹುಡಿ ಕನ್ನಡ ಪ್ರಾಥಮಿಕ ಶಾಲಾ ಆವರಣದಲ್ಲಿ ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿಗೆ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಅನೇಕ ರೀತಿಯ ಗ್ರಾಮೀಣ ಸೊಗಡಿನ ಆಟಗಳು ಮರೆಯಾಗಿವೆ. ಶಾಲಾ ಹಂತದಲ್ಲಿ ನಡೆಯುವ ಕ್ರೀಡೆಗಳಲ್ಲಿ ಭಾಗವಹಿಸುವ ಪ್ರತಿಭೆ ತೋರಿಸುವಂತೆ ಮಕ್ಕಳಿಗೆ ಶಿಕ್ಷಕರು, ಪಾಲಕರು ಪ್ರೋತ್ಸಾಹಿಸಬೇಕೆಂದರು.
ತಹಸೀಲ್ದಾರ್ ಶಿವಾನಂದ ಬಬಲಿ, ತಾಪಂ ಇಒ ಎಫ್.ಜಿ. ಚಿನನ್ನವರ, ಬಿಇಒ ಅಜೀತ ಮನ್ನಿಕೇರಿ, ಪಿಎಸ್‌ಐ ಎಚ್.ವೈ. ಬಾಲದಂಡಿ, ಪುರಸಭೆ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ನ್ಯಾಯವಾದಿ ಸಂಘದ ಮಾಜಿ ಅಧ್ಯಕ್ಷ ಕೆಂಪಣ್ಣ ಮಗದುಮ್ಮ, ಲಕ್ಷ್ಮಣ ಅಡಿಹುಡಿ, ಕನ್ನಡ ಪ್ರಾಥಮಿಕ ಶಾಲೆಯ ಅಧ್ಯಕ್ಷ ಎಲ್.ವೈ. ಅಡಿಹುಡಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿವಿಧ ತಾಲೂಕಿನ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.