ಯಾದಗಿರಿ: ಯಾದಗಿರಿ ಮತಕ್ಷೇತ್ರದ ಗ್ರಾಮೀಣ ಭಾಗದಲ್ಲಿನ ಜನತೆಗೆ ಮೂಲಸೌಲಭ್ಯ ಒದಗಿಸಲು ಅಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ತಾಕೀತು ಮಾಡಿದ್ದಾರೆ.
ಮಂಗಳವಾರ ಇಲ್ಲಿನ ತಾಪಂ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ನನ್ನ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲ ಗ್ರಾಮ ಮತ್ತು ತಾಂಡಾಗಳಲ್ಲಿ ಶುದ್ಧ ಕುಡಿಯುವ ನೀರು, ಬೀದಿದೀಪ, ಚರಂಡಿ, ಸಿಸಿ ರಸ್ತೆ ಹೀಗೆ ಮೂಲಸೌಲಭ್ಯ ಒದಗಿಸಲು ಯುದ್ದೋಪಾದಿಯಲ್ಲಿ ಕೆಲಸ ಮಾಡಬೇಕು. ವಿಶೇಷವಾಗಿ ಪಂಚಾಯಿತಿ ಅಭಿವೃದ್ಧಿ ಅಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಮಳೆ ಹೆಚ್ಚಾದ ಕಾರಣ ಗ್ರಾಮೀಣ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಇದರಿಂದ ಜನತೆಗೆ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಇದರ ಜತೆಗೆ ಆರ್ಓ ಪ್ಲಾಂಟ್ಗಳು ಹಾಳಾದ ಪರಿಣಾಮ ಶುದ್ಧ ಕುಡಿಯುವ ನೀರು ಸಿಗದೆ ಜನತೆ ತೊಂದರೆಯಲ್ಲಿದ್ದಾರೆ. ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಸಮರ್ಪಕ ರೀತಿಯಲ್ಲಿ ಆಗಬೇಕು. ಈ ವಿಷಯದಲ್ಲಿ ಸಬೂಬು ಹೇಳಿದರೆ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಲು ಗ್ರಾಪಂ ಅಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಚರಂಡಿ ಸುತ್ತಲೂ ಬ್ಲಿಚಿಂಗ್ ಪೌಡರ್ ಸಿಂಪಡಿಸಬೇಕು. ಸಾಂಕ್ರಾಮಿಕ ರೋಗ ಹರಡದಂತೆ ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಹ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ತಾಪಂ ಇಒ ಬಸವರಾಜ ಶರಬೈ, ಎಚ್.ವಿ.ರಾಘವೇಂದ್ರ, ಬರಸವರಾಜ ಐರೆಡ್ಡಿ, ಮತ್ತು ತಾಲೂಕ ಮಟ್ಟದ ಅಕಾರಿಗಳು ಸಭೆಯಲ್ಲಿದ್ದರು.