ಜಿಲ್ಲೆ

ಚರ್ಚಿಸಿ ಸಮಸ್ಯೆಗೆ ಪರಿಹಾರ ರೂಪಿಸಿ  -ಜಿಲ್ಲಾ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ ಹೇಳಿಕೆ * ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

ದಾವಣಗೆರೆ: ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆಯೇ ಪರಿಹಾರವಲ್ಲ. ಮುಕ್ತ ಮನಸ್ಸಿನಿಂದ ಚರ್ಚಿಸಿ ಪರಿಹಾರ ಕಂಡುಕೊಂಡು ನಕಾರಾತ್ಮಕ ಅಲೋಚನೆಯಿಂದ ಹೊರ ಬರಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

2003ನೇ ವರ್ಷದಿಂದಲೂ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನವನ್ನು ಆಚರಿಸಲಾಗುತ್ತಿದೆ. ಇಂದಿನ ದಿನಮಾನಗಳಲ್ಲಿ ವಿವಿಧ ಒತ್ತಡಗಳ ಕಾರಣಗಳಿಂದ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿರುವುದು ವಿಷಾದನೀಯ ಎಂದರು.

ಆತ್ಮಹತ್ಯೆಗೆ ಶರಣಾಗುವುದು ಮಹಾಪಾಪ. ಏನೇ ಇದ್ದರೂ ಎದುರಿಸಿ ಹೋರಾಡಬೇಕು. ನಮ್ಮನ್ನು ನಂಬಿಕೊಂಡ ಕುಟುಂಬದವರ ಬಗ್ಗೆ ಒಮ್ಮೆ ಯೋಚನೆ ಮಾಡಬೇಕು. ಆಗ ಮನಸ್ಸು ಬದಲಾಗುತ್ತದೆ. ಒತ್ತಡಮುಕ್ತರಾಗಲು ಧ್ಯಾನ, ಯೋಗ, ಪ್ರಾಣಾಯಾಮ ಮಾಡಬೇಕು ಎಂದು ಸಲಹೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಎಂ. ಕರೆಣ್ಣವರ ಮಾತನಾಡಿ. ಆತ್ಮಹತ್ಯೆ ಎಂಬುದು ನಮಗೆ ನಾವು ಮಾಡಿಕೊಳ್ಳುವ ಮಹಾಮೋಸ. ಆತ್ಮಹತ್ಯೆಗಳನ್ನು ತಡೆಗಟ್ಟಲು ನಾವು ಆಧ್ಯಾತ್ಮ ಚಟುವಟಿಕೆಗಳತ್ತ ಒಲವು ತೋರುವುದು ಅತ್ಯವಶ್ಯಕ ಎಂದು ಹೇಳಿದರು.

ಮನುಷ್ಯ ಇತರೆ ಜೀವಿಗಳಿಗಿಂತ ಹೆಚ್ಚು ಆಲೋಚಿಸುವ, ಸರಿ-ತಪ್ಪು ತಿಳಿದುಕೊಳ್ಳುವ ವಿಶಿಷ್ಟ ಶಕ್ತಿ ಹೊಂದಿದ್ದಾನೆ. ಹೀಗಾಗಿ ಜೀವನದಲ್ಲಿ ತನ್ನ ಕರ್ತವ್ಯ ಅರಿತು ಬದುಕಬೇಕು. ಸಮಾಜದಲ್ಲಿ ಸುಧಾರಣೆ ತರುವ ಕೆಲಸ ಮಾಡಬೇಕು. ಕೈದಿಗಳು ಮುಂದಿನ ಭವಿಷ್ಯದ ಬಗ್ಗೆ ಯೋಚಿಸಬೇಕು. ಸಿಟ್ಟಿನ ಕೈಯಲ್ಲಿ ಬುದ್ಧಿ ನೀಡಬಾರದು ಎಂದು ತಿಳಿಸಿದರು.

ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಮಂಜುನಾಥ ಎಲ್ ಪಾಟೀಲ್ ಮಾತನಾಡಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಿಂದ ತಾಲೂಕುವಾರು ಮನೋಚೈತನ್ಯ ಕಾರ್ಯಕ್ರಮ ರೂಪಿಸಿ ಜಿಲ್ಲೆಯಲ್ಲಿ ಸಮುದಾಯದ ಜನರಿಗೆ ಮಾನಸಿಕ ಆರೋಗ್ಯದ ಅರಿವು ಮೂಡಿಸಲಾಗುತ್ತಿದೆ. ಮಾನಸಿಕ ಅಸ್ವಸ್ಥರನ್ನು ಗುರುತಿಸಿ, ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಕಾರಾಗೃಹ ಅಧೀಕ್ಷಕಿ ಎಲ್. ಭಾಗೀರಥಿ, ಜೆ.ಜೆ.ಎಂ ವೈದ್ಯಕೀಯ ಕಾಲೇಜಿನ ಮನೋವೈದ್ಯಕೀಯ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಕೆ.ನಾಗರಾಜರಾವ್ ಹಾಗೂ ಕಾರಾಗೃಹದ ಸಿಬ್ಬಂದಿ ಇದ್ದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಚಿಗಟೇರಿ ಜಿಲ್ಲಾಸ್ಪತ್ರೆಯ ಮನೋವೈದ್ಯಕೀಯ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.