ಹನೂರು: ಚರ್ಮಗಂಟು ರೋಗದ ಬಗ್ಗೆ ಎಚ್ಚರಿಕೆ ವಹಿಸುವಂತೆ ರೈತರಿಗೆ ತಿಳಿಸುವುದರ ಜತೆಗೆ ಪ್ರತಿ ಹಸುವಿಗೂ ಲಸಿಕೆ ಹಾಕಿಸುವಂತೆ ಅರಿವು ಮೂಡಿಸಬೇಕು ಎಂದು ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿದ್ದರಾಜು ತಿಳಿಸಿದರು.
ಪಟ್ಟಣದ ಪಶುಪಾಲನಾ ಇಲಾಖೆಯ ಸಭಾಂಗಣದಲ್ಲಿ ಬುಧವಾರ ಜಾನುವಾರುಗಳಲ್ಲಿ ಚರ್ಮಗಂಟು ರೋಗ ತಡೆಗಟ್ಟುವ ಸಂಬಂಧ ಪಶು ಸಖಿಯರಿಗೆ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹನೂರು ತಾಲೂಕಿನಲ್ಲಿ ಹೆಚ್ಚಿನ ರೈತರು ಕೃಷಿಯ ಜತೆಗೆ ಹೈನುಗಾರಿಕೆಯನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ತಾಲೂಕಿನಲ್ಲಿ ಗಣತಿಯ ಅಂಕಿ-ಅಂಶದ ಪ್ರಕಾರ 60,501 ಹಸು, ದನ ಹಾಗೂ ಕರುಗಳಿವೆ. ಈ ಹಿಂದೆ 2022ರಲ್ಲಿ ಕುರಟ್ಟಿ ಹೊಸೂರು ಗ್ರಾಮದಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡು 270 ಹಸುಗಳು ಮೃತಪಟ್ಟಿದ್ದವು. ಈ ವೇಳೆ ಇನ್ನುಳಿದ ಹಸುಗಳಿಗೆ ಅಗತ್ಯ ಲಸಿಕೆ ನೀಡಿದ ಬಳಿಕ ಚೇತರಿಸಿಕೊಂಡಿದ್ದವು. ಇದೀಗ ಇದೇ ಗ್ರಾಮದಲ್ಲಿ ಹಸುಗಳಿಗೆ ಈ ರೋಗ ಮತ್ತೆ ಕಾಣಿಸಿಕೊಂಡಿದೆ. ಹಾಗಾಗಿ ಪ್ರತಿಯೊಬ್ಬರೂ ಈ ಬಗ್ಗೆ ನಿಗಾ ವಹಿಸುವುದು ಅಗತ್ಯವಾಗಿದೆ. ಈಗಾಗಲೇ ಹಿರಿಯ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ, ಜಾನುವಾರುಗಳಿಗೆ ಲಸಿಕೆ ನೀಡಲಾಗಿದ್ದು, ರೋಗ ಹರಡದಂತೆ ಅನುಸರಿಸಬೇಕಾದ ಅಗತ್ಯ ಸಲಹೆ, ಸೂಚನೆಯನ್ನು ರೈತರಿಗೆ ನೀಡಲಾಗಿದೆ ಎಂದು ತಿಳಿಸಿದರು.
ಲಸಿಕೆಯ ಬಗ್ಗೆ ಅರಿವು ಮೂಡಿಸಿ: ಜಾನುವಾರುಗಳಿಗೆ ಅಗತ್ಯ ವೈದ್ಯಕೀಯ ಸೇವೆ ಒದಗಿಸುವ ಜತೆಗೆ ಹೈನುಗಾರಿಕೆಗೆ ಉತ್ತೇಜನ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಆದ್ದರಿಂದ ಪ್ರತಿಯೊಬ್ಬರೂ ಆಯಾ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಬೇಕು. ಜಾನುವಾರುಗಳಿಗೆ ಚರ್ಮಗಂಟು ರೋಗ ತಗುಲದಂತೆ ಎಚ್ಚರಿಕೆ ವಹಿಸುವಂತೆ ರೈತರಲ್ಲಿ ಅರಿವು ಮೂಡಿಸಬೇಕು. ಕೊಟ್ಟಿಗೆಗಳನ್ನು ಪರಿಶೀಲಿಸಬೇಕು. ಅಶುಚಿತ್ವದಿಂದ ಕೂಡಿದ್ದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸಲಹೆ ನೀಡಬೇಕು. ಒಂದು ವೇಳೆ ಹಸುಗಳಲ್ಲಿ ರೋಗ ಕಾಣಿಸಿಕೊಂಡಿದ್ದಲ್ಲಿ ಕೂಡಲೇ ನಮ್ಮ ಗಮನಕ್ಕೆ ತರಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು. ಈ ಬಗ್ಗೆ ಅಗತ್ಯ ಕ್ರಮವಹಿಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು. ಇನ್ನು ಪ್ರತಿಯೊಂದು ಹಸುವಿಗೂ ಲಸಿಕೆ ಹಾಕಿಸುವಂತೆ ರೈತರನ್ನು ಮನವೊಲಿಸಬೇಕು. ಈ ಮೂಲಕ ಜಾನುವಾರುಗಳಿಗೆ ಚರ್ಮಗಂಟು ರೋಗ ತಗುಲದಂತೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ತಿಳಿಸಿದರು.
ಇದೇ ವೇಳೆ ಪಶು ಸಖಿಯರಿಂದ ಅಗತ್ಯ ಮಾಹಿತಿಯನ್ನು ಪಡೆಯಲಾಯಿತು. ಈ ಸಂದರ್ಭದಲ್ಲಿ ಪಶು ಸಖಿಯರು ಹಾಗೂ ಕಚೇರಿ ನೌಕರರು ಇದ್ದರು.