ಮೈಸೂರು: ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಕುರಿತು ಕಾಂಗ್ರೆಸ್ ತಲೆಕೆಡಿಸಿಕೊಂಡಿದೆ.
ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಗರದ ಖಾಸಗಿ ಹೋಟೆಲ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳು, ಸ್ಥಳೀಯ ಮುಖಂಡರೊಂದಿಗೆ ಚರ್ಚೆ ಮಾಡಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಸಮಾಲೋಚಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ 12ಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಅದರಲ್ಲಿ ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಅನೇಕ ಮುಖಂಡರಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ತಯಾರಿ ನಡೆಸಿದೆ. ಬೆಂಗಳೂರಿನಲ್ಲಿ ಟಿಕೆಟ್ ಹಂಚಿಕೆ ಕುರಿತು ಪರಿಶೀಲನಾ ಸಭೆ ಈಗಾಗಲೇ ಜರುಗಿತ್ತು. ಅಭ್ಯರ್ಥಿಯನ್ನು ಅಂತಿಮಗೊಳಿಸಲು ಸ್ಥಳೀಯ ಮಟ್ಟದ ಮುಖಂಡರೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.
ಕಳೆದ ಸಲದ ತಮ್ಮ ಸೋಲನ್ನು ಸವಾಲಾಗಿ ತೆಗೆದುಕೊಂಡಿರುವ ಸಿದ್ದರಾಮಯ್ಯ, ಈ ಸಲ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲೇಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ, ಯಾರು ಅಭ್ಯರ್ಥಿಯಾದರೆ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಟಿಕೆಟ್ ಆಕಾಂಕ್ಷಿಗಳಾದ ಕೆ.ಮರಿಗೌಡ, ಮಾವಿನಹಳ್ಳಿ ಸಿದ್ದೇಗೌಡ ಸೇರಿದಂತೆ ಹಲವು ಮುಖಂಡರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದರು.
ಈ ಸಲ ಚಾಮುಂಡೇಶ್ವರಿ ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲಲೇಬೇಕು. ಈ ಹಿನ್ನೆಲೆಯಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸ್ಥಳೀಯ ನಾಯಕರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.