ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ.ಸುಧಾಕರ್ ತಿಳಿಸಿದ್ದಾರೆ.
ನಗರದ ಜೈ ಭೀಮ್ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಭಾನುವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಪರಿನಿರ್ವಾಣ ದಿನದಲ್ಲಿ ಮಾತನಾಡಿ, ದೇಶದಲ್ಲಿ ಅಸಮಾನತೆ, ಅಸ್ಪಶ್ಯತೆಯ ನಿವಾರಣೆಗೆ ಅಂಬೇಡ್ಕರ್ ಶ್ರಮಿಸಿದರು. ಸಮ ಸಮಾಜ ನಿರ್ಮಾಣದ ಕನಸು ಕಂಡಿದ್ದರು. ಪರಿಪೂರ್ಣ ಭಾರತೀಯ ಪರಿಕಲ್ಪನೆಯ ಪೂರಕವಾದ ಬಾಬಾ ಸಾಹೇಬ್ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್, ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ರಾಜಾಕಾಂತ್, ನಗರಸಭೆ ಅಧ್ಯಕ್ಷ ಆನಂದ್‌ರೆಡ್ಡಿ ಬಾಬು, ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಸಮಾಜ ಕಲ್ಯಾಣಾಧಿಕಾರಿ ತೇಜ್ ಆನಂದ್‌ರೆಡ್ಡಿ, ಮುಖಂಡರಾದ ಜೀವಿಕ ಗೋಪಾಲ್, ರತ್ನಮ್ಮ ಇತರರಿದ್ದರು.