ಚಾಮರಾಜನಗರ: ಜಿಲ್ಲೆಯಾದ್ಯಂತ ಜ.30 ರಿಂದ ಫೆ.13 ರವರೆಗೆ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ವಿಗಾಗಿ ಶ್ರಮಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಊ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಷ್ಠರೋಗ ಮುಕ್ತ ಭಾರತ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಕನಸಾಗಿತ್ತು. ಗಾಂಧಿಜೀಯವರು ಹುತಾತ್ಮರಾದ ದಿನವಾದ ಜ.30ರಿಂದ 15 ದಿನಗಳ ಕಾಲ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ ಏರ್ಪಡಿಸಲಾಗುತ್ತಿದೆ. ಕುಷ್ಠರೋಗವು ಲಿಪ್ರೆ ಎಂಬ ಬ್ಯಾಕ್ಟೀರಿಯಾದಿಂದ ಬರುವ ಕಾಯಿಲೆಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಗುಣಲಕ್ಷಣಗಳನ್ನು ಪತ್ತೆಹಚ್ಚಿ ಶೀಘ್ರ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದಾಗಿದೆ. ಕಾಯಿಲೆ ನಿರ್ಮೂಲನೆಗಾಗಿ ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡಬೇಕಿದೆ ಎಂದರು.
ಕುಷ್ಠರೋಗದ ನಿರ್ಮೂಲನೆ ಕುರಿತು ಜಿಲ್ಲೆಯ ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ಅಧ್ಯಕ್ಷರು, ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನೊಳಗೊಂಡ ತಂಡವು ಐ.ಇ.ಸಿ ಚಟುವಟಿಕೆಗಳಡಿ ವ್ಯಾಪಕವಾಗಿ ಜನಜಾಗೃತಿ ಮೂಡಿಸಿ ಕುಷ್ಠರೋಗದ ಬಗ್ಗೆ ಜನರಲ್ಲಿರುವ ಕೀಳಿರಿಮೆಯನ್ನು ಹೋಗಲಾಡಿಸಬೇಕಿದೆ. ಚಿಕಿತ್ಸೆ ಪಡೆದುಕೊಳ್ಳುವಂತೆ ಜನರ ಮನವೊಲಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಬೆಳಗಿನ ಪ್ರಾರ್ಥನಾ ವೇಳೆ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ವಾಸವಿರುವ ವಿದ್ಯಾರ್ಥಿಗಳಿಗೆ ಕುಷ್ಠರೋಗದ ನಿಯಂತ್ರಣ ಬಗ್ಗೆ ಅರಿವು ನೀಡಬೇಕು. ಗ್ರಾಮಗಳಲ್ಲಿನ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು, ಸ್ತ್ರೀಶಕ್ತಿ, ಸ್ವಸಹಾಯ ಗುಂಪುಗಳೊಂದಿಗೆ ಸಮನ್ವಯ ಸಾಧಿಸಿ ಕುಷ್ಠರೋಗ ಅರಿವು ಆಂದೋಲನದಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಕುಷ್ಠರೋಗದ ಗುಣಲಕ್ಷಣಗಳು ಹಾಗೂ ಅದರ ನಿಯಂತ್ರಣ ವಿಧಾನಗಳ ಕುರಿತು ಸಂಪೂರ್ಣ ತಿಳಿವಳಿಕೆ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಕುಷ್ಠರೋಗ ನಿರ್ಮೂನಾಧಿಕಾರಿ ಡಾ. ಚಂದ್ರಶೇಖರ್ ಮಾತನಾಡಿ, ಜಿಲ್ಲೆಯಲ್ಲಿ 38 ಪುರುಷರು ಹಾಗೂ 12 ಮಂದಿ ಮಹಿಳೆಯರು ಸೇರಿದಂತೆ ಒಟ್ಟು 50 ಕುಷ್ಠರೋಗಿಗಳನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ದೇಹದ ಯಾವುದೇ ಭಾಗದಲ್ಲಿ ತಿಳಿಬಿಳಿ ತಾಮ್ರ ವರ್ಣದ ಕೆಂಪುಮಿಶ್ರಿತ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳು ಕುಷ್ಠರೋಗದ ಲಕ್ಷಣವಾಗಿರಬಹುದು. ಅಂತಹವರು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ತಪಾಸಣೆಗೆ ಒಳಗಾಗಬೇಕು. ಅಗತ್ಯವಿದ್ದರೆ ಚಿಕಿತ್ಸೆ ಪಡೆಯಲು ಮುಂದಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ.ಸುಧಾ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಏಡ್ಸ್ ಪ್ರತಿಬಂಧಕ ಘಟಕದ ಅಧಿಕಾರಿ ಡಾ.ರವಿಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಅಂಕಪ್ಪ, ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್ ಹಾಗೂ ಇತರರು ಉಪಸ್ಥಿತರಿದ್ದರು.