ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಡಿ.ಸಿ.ತಮ್ಮಣ್ಣ ಮಾತನಾಡಿದರು. ಚಿಕ್ಕತಿಮ್ಮೇಗೌಡ, ಬಿಳಿಗೌಡ, ಕೂಳಗೆರೆ ಶೇಖರ್, ಮರಿಮಾದೇಗೌಡ, ಶಿವಲಿಂಗಯ್ಯ ಇದ್ದರು. 
ಜಿಲ್ಲೆ

ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದ ಎಚ್‌ಡಿಕೆ

ಮದ್ದೂರು: ರಾಜ್ಯದ ಎಲ್ಲ ವರ್ಗಗಳ ಜನರು ನೆಮ್ಮದಿಯಿಂದ ಜೀವನ ಮಾಡಬೇಕಿದ್ದರೆ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕಿದೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು.

ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ಶನಿವಾರ ಸೋಮನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರೈತರ ಕೋಟ್ಯಂತರ ರೂ. ಸಾಲ ಮನ್ನಾ ಮಾಡುವ ಜತೆಗೆ ಎಲ್ಲ ವರ್ಗದವರಿಗೂ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅನುಕೂಲ ಕಲ್ಪಿಸಿದ್ದರಿಂದ ರಾಜ್ಯದ ಜನತೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ನೋಡಲು ಬಯಸುತ್ತಿದ್ದಾರೆ ಎಂದು ತಿಳಿಸಿದರು.

ಎಚ್.ಡಿ.ಕುಮಾರಸ್ವಾಮಿ ಅವರು ಇನ್ನೊಮ್ಮೆ ಮುಖ್ಯಮಂತ್ರಿಯಾದರೆ ಪಂಚರತ್ನ ಯೋಜನೆಗಳ ಮೂಲಕ ಉಚಿತ ಶಿಕ್ಷಣ, ಆರೋಗ್ಯ, ರೈತರಿಗೆ ಹಲವು ರೀತಿಯಲ್ಲಿ ಅನುಕೂಲವಾಗುವ ರೈತ ಚೈತನ್ಯ ಕಾರ್ಯಕ್ರಮ, ಯುವ ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದು ಮತ್ತು ಮನೆ ಇಲ್ಲದ ಪ್ರತಿಯೊಬ್ಬರಿಗೂ ವಸತಿ ವ್ಯವಸ್ಥೆ ಕಲ್ಪಿಸುವುದು ಅವರ ಉದ್ದೇಶವಾಗಿದ್ದು, ಇದರಿಂದ ರಾಜ್ಯದ ಪ್ರತಿಯೊಬ್ಬರಿಗೂ ಅನುಕೂಲವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಈ ಮೂಲಕ ಎಲ್ಲ ವರ್ಗದವರಿಗೂ ಅನುಕೂಲವಾಗುವ ಯೋಜನೆಗಳನ್ನು ಎಚ್.ಡಿ.ಕುಮಾರಸ್ವಾಮಿ ಜಾರಿಗೆ ತರಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಉಪಾಧ್ಯಕ್ಷ ದೇವರಹಳ್ಳಿ ವೆಂಕಟೇಶ್, ಮುಖಂಡರಾದ ಮಾದನಾಯಕನಹಳ್ಳಿ ರಾಜಣ್ಣ, ಬಿಳಿಗೌಡ, ಚಿಕ್ಕಮಾದೇಗೌಡ, ಕೆಂಗಲ್‌ಗೌಡ, ಸತೀಶ್, ಎಲ್.ಶಿವಲಿಂಗಯ್ಯ, ರಾಮಕೃಷ್ಣ, ಸಿದ್ದರಾಜು, ಅರವಿಂದ್, ಮಹೇಂದ್ರ ಇದ್ದರು.