ಹಾಸನ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಹಾಗೂ ಹಾಸನ ಜಿಲ್ಲೆಗೆ ಸಾಕಷ್ಟು ಕೊಡುಗೆಗೆಗಳನ್ನು ನೀಡಿದ್ದು, ಎಲ್ಲಾ ಇಲಾಖೆಗಳು ಸಾಕಷ್ಟು ಪ್ರಗತಿ ಕಂಡಿವೆ. ಬಡವರ, ರೈತರ, ಕೂಲಿ ಕಾರ್ಮಿಕರ ಪರವಾಗಿರುವ ಬಿಜೆಪಿ ಸರಕಾರದ ಅವಧಿಯಲ್ಲಿ ಹಾಸನ ಜಿಲ್ಲೆಯು ಸಮಗ್ರ ಅಭಿವೃದ್ಧಿ ಕಂಡಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.
ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಸೋಮವಾರ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಕೆ. ಗೋಪಾಲಯ್ಯ ಅವರು, ಕೋವಿಡ್ ಸಂದರ್ಭದಲ್ಲಿ ಜನರು ಹಸಿವಿನಿಂದ ಇರಬಾರದು ಎಂಬ ದೃಷ್ಟಿಯಿಂದ ಜನರಿಗೆ ಉಚಿತವಾಗಿ ಆಹಾರ ಪದಾರ್ಥಗಳನ್ನು ವಿತರಿಸುವ ಕೆಲಸವನ್ನು ಸರಕಾರ ಮಾಡಿದೆ. ಹಾಸನ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಸಹಕಾರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಿಗೆ ಹೆಚ್ಚಿನ ಅನುದಾನ ನೀಡಿ ಪ್ರೋತ್ಸಾಹಿಸಿದೆ ಎಂದು ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ಕೊಂಡಾಡಿದರು.
ಒಂದಲ್ಲ ಒಂದು ರೀತಿಯ ಯೋಜನೆಗಳನ್ನು ಪ್ರಧಾನಿ ಮೋದಿ, ಯಡಿಯೂರಪ್ಪ, ಬೊಮ್ಮಾಯಿ ಅವರು ಫಲಾನುಭವಿಗಳಿಗೆ ತಲುಪುವಂತೆ ಮಾಡಿದ್ದಾರೆ. ಉಜ್ವಲ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ, ಜಲಜೀವನ್ ಯೋಜನೆ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನರ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಕಾರಿ ಇಲಾಖೆಯ ಮೂಲಕ ಬಡವರ ಅಭಿವೃದ್ಧಿಗೆ ಮುಂದಾಗಿದ್ದು, ಸಹಕಾರಿ ಸಂಘಗಳಿಗೆ ನೀಡಲಾಗುತ್ತಿದ್ದ 3 ಲಕ್ಷ ರೂ.ವರೆಗಿನ ಬಡ್ಡಿರಹಿತ ಸಾಲವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದೆ. ಅಲ್ಲದೆ ಇಲಾಖೆಯ ಅಡಿಯಲ್ಲಿ ಇರುವ ಹತ್ತು ಹಲವು ಕಾರ್ಯಕ್ರಮಗಳಲ್ಲಿ ಬಡವರ ಅಭಿವೃದ್ದಿಯನ್ನು ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಿದೆ ಎಂದರು.
ಹಾಸನ ಡಿಸಿಸಿ ಬ್ಯಾಂಕಿಗೆ 1100 ಕೋಟಿ ಹಣವನ್ನು ನೀಡಲಾಗಿದ್ದು, ಈಗಾಗಲೇ 900 ಕೋಟಿಗೂ ಹೆಚ್ಚು ಹಣವನ್ನು ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಬಡ್ಡಿರಹಿತ ಸಾಲವಾಗಿ ಕೊಡಲಾಗಿದೆ. ಈ ತಿಂಗಳಾಂತ್ಯಕ್ಕೆ ಉಳಿದ ಹಣವನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಸಹಕಾರಿ ಸಚಿವರು ಮಾಹಿತಿ ನೀಡಿದರು.
ಶಾಸಕರಾದ ಪ್ರೀತಂ ಗೌಡ ಕ್ಷೇತ್ರಕ್ಕೆ ಕೋಟ್ಯಂತರ ರೂ. ಅನುದಾನ ತಂದಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ತುಂಬಾ ಕಾಳಜಿ ವಹಿಸಿ ಸೌಲಭ್ಯ ತಂದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆನ್ನು ಬಿದ್ದು ಅಪಾರ ಅನುದಾನ ತಂದಿದ್ದಾರೆ. ಸಹಕಾರ ಸಂಘಗಳ ಮೂಲಕ ರೈತರಿಗೆ ನೆರವು ಒದಗಿಸಲು ಸಾಕಷ್ಟು ಶ್ರಮಿಸಿದ್ದಾರೆ ಎಂದು ಸಚಿವ ಸೋಮಶೇಖರ್ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಪ್ರೀತಂ ಗೌಡ ಅವರು ಮಾತನಾಡಿ, ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ 2500ಕೋಟಿ ರೂ. ವೆಚ್ಚದಲ್ಲಿ ಮನೆಮನೆಗೆ ನೀರು ಪೂರೈಸಲಾಗುತ್ತಿದೆ. ಹಾಸನ ಕ್ಷೇತ್ರದಲ್ಲಿ ಹತ್ತಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಸಂಪರ್ಕ, ಒಳಚರಂಡಿ, ಪಾರ್ಕ್ ಅಭಿವೃದ್ಧಿ, ಕೆರೆ ತುಂಬುವ ಕೆಲಸ, ರಿಂಗ್ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಶೇ. 90 ಅಭಿವೃದ್ಧಿ ಮುಗಿಸಲಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಅನುದಾನ ಹಾಸನ ಕ್ಷೇತ್ರಕ್ಕೆ ಬಂದಿದೆ. ಸಾವಿರಾರು ಕೋಟಿ ಅನುದಾನ ತರಲಾಗಿದೆ. ಕೇವಲ ಐದು ವರ್ಷಗಳಲ್ಲಿ ಅಭಿವೃದ್ಧಿಗೆ ವೇಗ ನೀಡಿ ಸಾಧಿಸಿ ತೋರಿಸಲಾಗಿದೆ ಎಂದರು.
ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸರ್ಕಾರದಿಂದ ಜನರಿಗೆ ನೂರು ರೂಪಾಯಿ ಅನುದಾನ ಬಿಡುಗಡೆ ಮಾಡಿದರೆ ಅದರಲ್ಲಿ ಫಲಾನುಭವಿಗೆ ತಲುಪುವುದೇ ಕೇವಲ 18 ರೂಪಾಯಿ ಮಾತ್ರ ಎಂದು ಹೇಳಿದ್ದರು. ಆ ಸಂದರ್ಭದಲ್ಲಿ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ಇಂದು ಮೋದಿ ಅವರು ಪ್ರಧಾನಿಯಾದ ಬಳಿಕ ಪ್ರತಿಯೊಬ್ಬರಿಗೂ ಜನಧನ್ ಖಾತೆ ತೆರೆದು ನೇರವಾಗಿ ಹಣ ಯಾವುದೇ ಮಧ್ಯವರ್ತಿಗಳ ಪಾಲಾಗದೆ ಫಲಾನುಭವಿಗಳಿಗೆ ಸೇರುವಂತೆ ಮಾಡಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿವಿಧ ಸಂಘ- ಸಂಸ್ಥೆಗಳ ಫಲಾನುಭವಿಗಳಿಗೆ ಪರಿಹಾರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ವಿಧಾನ ಪರಿಷತ್ ಸದಸ್ಯ ಮುನಿರಾಜೇಗೌಡ, ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ, ಎಸ್ಪಿ ಹರೀರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಆನಂದ್, ನಗರಾಭೆ ಅಧ್ಯಕ್ಷ ಆರ್.ಮೋಹನ್, ಹಿಮ್ಸ್ ನಿರ್ದೇಶಕ ರವಿಕುಮಾರ್, ಉಪ ವಿಭಾಗಾಧಿಕಾರಿ ಕೃಪಾಲಿನಿ ಸೇರಿದಂತೆ ಇತರರು ಇದ್ದರು.