ಜಿಲ್ಲಾ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ
ಚಿಕ್ಕಮಗಳೂರು: ರಾಜ್ಯದ ಅಭಿವೃದ್ಧಿಗೆ ಎದುರಾಗುವ ಅಡೆತಡೆಗಳು, ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಮಹತ್ವ ಪಡೆದುಕೊಂಡಿರುವ ದೇಶದ ನೀತಿ ಆಯೋಗದ ಸಭೆಯಲ್ಲಿ ರಾಜ್ಯದ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಗೈರಾಗುವ ಮೂಲಕ ರಾಜ್ಯದ ಜನರ ಹಿತಾಸಕ್ತಿಗೆ ಕೊಳ್ಳಿ ಇಟ್ಟಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಗಳ ಅಭಿವೃದ್ಧಿ ದೃಷ್ಟಿಯಲ್ಲಿ ನೀತಿ ಆಯೋಗ ಮಹತ್ವದ ಪಾತ್ರ ವಹಿಸುತ್ತದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯ ಮಂತ್ರಿಗಳು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ತಮ್ಮ ರಾಜ್ಯಗಳ ಅಭಿವೃದ್ಧಿಗೆ ಅಡ್ಡಿಯಾಗಿರುವ ಸಮಸ್ಯೆಗಳನ್ನು ಮಂಡಿಸಿ ಸೂಕ್ತ ಪರಿಹಾರವನ್ನು ಪಡೆದುಕೊಳ್ಳುತ್ತಾರೆ. ಆದರೆ, ನಮ್ಮ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಸಭೆಯಲ್ಲಿ ಭಾಗವಹಿಸದೆ ರಾಜ್ಯದ ೭ ಕೋಟಿ ಜನರ ಹಿತಾಸಕ್ತಿಗೆ ದ್ರೋಹ ಎಸಗಿದ್ದಾರೆ ಎಂದು ಟೀಕಿಸಿದ್ದಾರೆ.
ಈ ಹಿಂದೆ ರಾಜ್ಯದ ಮುಖ್ಯ ಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಸಕ್ರಿಯವಾಗಿ ಭಾಗವಹಿಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ಮಂಡಿಸಿ ಅಗತ್ಯ ಪರಿಹಾರಗಳನ್ನು ಕಂಡುಕೊಳ್ಳುತ್ತಿದ್ದರು. ಆದರೆ, ಮುಖ್ಯ ಮಂತ್ರಿ ಸಿದ್ಧರಾಮಯ್ಯ ಸ್ವಾರ್ಥ ಮತ್ತು ಪಕ್ಷ ರಾಜಕಾರಣಕ್ಕಾಗಿ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸದೆ ಮಾಧ್ಯಮದ ಎದುರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸದೆ ದುರುದ್ದೇಶದಿಂದ ಟೀಕೆ ಮಾಡುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ನಿಲ್ಲಿಸಬೇಕು. ನೀತಿ ಆಯೋಗದ ಸಭೆಗೆ ಪ್ರತಿ ಸಲ ಗೈರಾಗುವ ಮೂಲಕ ರಾಜ್ಯದ ಗೌರವಕ್ಕೆ ದಕ್ಕೆ ತರುತ್ತಿರುವುದನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದಿದ್ದಾರೆ.
ಮಾದ್ಯಮಗಳ ಎದುರು ಕೇಂದ್ರ ಸರ್ಕಾರವನ್ನು ಟೀಕಿಸುವ ಸಿದ್ಧರಾಮಯ್ಯ ಅವರು ನೀತಿ ಆಯೋಗದ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಎದುರು ಕೂರಲು ಧೈರ್ಯವಿಲ್ಲದೆ ಗೈರಾಗುತ್ತಿದ್ದಾರೆ ಎಂದು ಟೀಕಿಸಿರುವ ಅವರು, ರಾಜ್ಯದ ಜನರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಮುಂದಿನ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿ ಜನರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಮುಖ್ಯ ಮಂತ್ರಿ ಗಮನಹರಿಸಲಿ ಎಂದು ಕಿವಿಮಾತು ಹೇಳಿದ್ದಾರೆ.