ಚಾಮರಾಜನಗರ: ತಾಲೂಕಿನ ಬಾಗಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಜನ್ನೂರು ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಸರ್ಕಾರಿ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಸದಸ್ಯ ನಾಗರಾಜು ಆರೋಪಿಸಿದರು.
ಜನ್ನೂರು ಗ್ರಾಮದ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಹಿಂಭಾಗದ ಸರ್ವೇ ನಂ.167/2ಎ ರಲ್ಲಿ ಇರುವ ಸುಮಾರು 2.5 ಗುಂಟೆ ಸರ್ಕಾರಿ ಜಾಗವನ್ನು ಗ್ರಾಮದ ಶಾಂತರಾಜು ಎಂಬುವವರು ಅಕ್ರಮವಾಗಿ ವಶಪಡಿಸಿಕೊಂಡು ಶೆಡ್ ನಿರ್ಮಾಣ ಮಾಡಿದ್ದಾರೆ. ಇದರಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಅವರು ಶಾಮೀಲಾಗಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಈ ಸಂಬಂಧ ತಹಸೀಲ್ದಾರ್, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ಈ ನಿಟ್ಟಿನಲ್ಲಿ ಪಿಡಿಓ ಶಿವಕುಮಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರಿ ಆಸ್ತಿಯನ್ನು ಸಂರಕ್ಷಿಸಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ದಸಂಸ ಸಂಚಾಲಕ ಬೆಳ್ಳಿಯಪ್ಪ, ಗ್ರಾ.ಪಂ ಮಾಜಿ ಉಪಾಧ್ಯಕ್ಷ ದೊರೆಸ್ವಾಮಿ, ರಂಗಸ್ವಾಮಿ, ಮಹೇಶ್ ಹಾಜರಿದ್ದರು.