ಮಳವಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹಮದ್ ನೀಡಿರುವ ಹೇಳಿಕೆ ಖಂಡಿಸಿ ಮಳವಳ್ಳಿ ಪಟ್ಟಣದಲ್ಲಿ ಮಂಗಳವಾರ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಅನಂತರಾಮ್ ವೃತ್ತದಲ್ಲಿ ಸೇರಿದ ಎರಡೂ ಪಕ್ಷದ ಮುಖಂಡರು, ಕಾರ್ಯಕರ್ತರು ಸಚಿವ ಜಮೀರ್ ಅಹಮದ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪುರಸಭೆ ಸದಸ್ಯ ಟಿ.ನಂದಕುಮಾರ್ ಮಾತನಾಡಿ, ಜೆಡಿಎಸ್ ಪಕ್ಷದಿಂದಲೇ ಅದರಲ್ಲೂ ದೇವೇಗೌಡರ ಕುಟುಂಬದ ನೆರವಿನಿಂದಲೇ ರಾಜಕೀಯವಾಗಿ ಬೆಳೆದು ಅವರ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿರುವುದು ಸರಿಯಲ್ಲ ಎಂದು ಹೇಳಿದರು.
ಚುನಾವಣೆ ಹಾಗೂ ಇನ್ನಿತರ ಸಂದರ್ಭದಲ್ಲಿ ಜೆಡಿಎಸ್, ಬಿಜೆಪಿ ನಾಯಕರ ವಿರುದ್ಧ ಉದ್ಧಟತನದ ಹೇಳಿಕೆ ನೀಡುತ್ತಾ ಕೋಮುವಾದದ ಹೆಸರಿನಲ್ಲಿ ಜನರನ್ನು ಪ್ರಚೋದಿಸುವ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಸಮಾಜದಲ್ಲಿ ಶಾಂತಿಗೆ ಭಂಗ ಉಂಟು ಮಾಡುತ್ತಿದ್ದಾರೆ. ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದರು.
ನಂತರ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಬಿ.ವಿ.ಕುಮಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷ ಬಸವರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣ, ಸದಸ್ಯರಾದ ನಾಗೇಶ್, ಜಿಪಂ ಮಾಜಿ ಸದಸ್ಯ ಹನುಮಂತು, ಮುಖಂಡರಾದ ಕಾಂತರಾಜು, ಸಿದ್ಧಾಚಾರಿ, ಅಂಕನಾಥ್, ದುಗ್ಗನಹಳ್ಳಿ ನಾಗರಾಜು ಮತ್ತಿತರರು ಪಾಲ್ಗೊಂಡಿದ್ದರು.