ಹಾಸನ: ಬಾಬು ಜಗಜೀವನರಾಂ ಅವರ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಅಗತ್ಯಪೂರ್ವ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಯಂತಿಗಳ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಏ.5 ರಂದು ಬಾಬು ಜಗಜೀವನರಾಂ ಅವರ 118 ನೇ ಜಯಂತಿ ಕಾರ್ಯಕ್ರಮವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಹಾಗೂ ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಹಾಸನಾಂಬ ಕಲಾಕ್ಷೇತ್ರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಆಚರಿಸಬೇಕು ಎಂದು ತಿಳಿಸಿದರು.
ಜಯಂತಿ ಆಚರಣೆ ದಿನಗಳಂದು ಮೊದಲು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆಗೆ ಚಾಲನೆ ನೀಡಲಾಗುವುದು ಹಾಗೂ ವೇದಿಕೆ ಕಾರ್ಯಕ್ರಮವನ್ನು ನಿಗದಿತ ಸ್ಥಳದಲ್ಲಿ ಅಂದು ಬೆಳಗ್ಗೆ 11 ಗಂಟೆ ಜರುಗಲಿದೆ. ಸದರಿ ಜಯಂತಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಬೇಕು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿಲಾಗುವುದು ಹಾಗೂ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ವಿಷಯ ತಜ್ಞರು ಆಹ್ವಾನಿಸುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ರಕ್ಷಣೆಗಾಗಿ ಮೇಲ್ಛಾವಣಿ ನಿರ್ಮಾಣಕ್ಕೆ ಕ್ರಮ ವಹಿಸುವಂತೆ ನಗರ ಸಭೆ ಆಯುಕ್ತರಿಗೆ ಸೂಚಿಸಿದರು. ನಗರದಲ್ಲಿ ಬಾಬು ಜಗಜೀವನರಾಂ ಅವರ ಭವನ ನಿರ್ಮಾಣಕ್ಕೆ ವಿಹಾರ ಧಾಮದ ಬಳಿ 10 ಗುಂಟೆ ಜಾಗವನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಉಪ ವಿಭಾಗಾಧಿಕಾರಿ ಮಾರುತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ದೂದ್ ಫೀರ್ ಮತ್ತಿತರ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.