ಜಿಲ್ಲೆ

ಜಿಲ್ಲಾಧಿಕಾರಿ ಜೊತೆ ಒಂದು ದಿನ

ಹಾಸನ :

ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಹಲವಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ರಾಜ್ಯದ ಯುವ ಜನತೆಗೆ ಪರಿಚಯಿಸುತ್ತಿದೆ. ವಿವಿಧ ಕೌಶಲದೊಂದಿಗೆ ಯುವಜನರನ್ನು ಉದ್ಯಮಶೀಲರನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನ ತಿಳಿಸಿದರು.
ಯುವ ಕೌಶಲ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೊತ್ತರ ಕಾಲೇಜಿನ ಬಿ.ಎ. ಎರಡನೇ ವರ್ಷದ ವಿದ್ಯಾರ್ಥಿ ಎಸ್. ಸಾಗರ್ ಅವರನ್ನು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನಿಸಿ ಅವರು ಮಾತನಾಡಿದರು.
ಕೌಶಲ ಸ್ಪೂರ್ತಿ ಕಾರ್ಯಕ್ರಮದಡಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗೆ ಜಿಲ್ಲಾಧಿಕಾರಿಯೊಂದಿಗೆ ಒಂದು ದಿನ ಅವರ ಎಲ್ಲಾ ಸರ್ಕಾರಿ ಚಟುವಟಿಕೆಗಳಲ್ಲಿ ಭಾಗಿ ಆಗುವ ಅವಕಾಶ ಕಲ್ಪಿಸಲಾಗಿತ್ತು. ಸರ್ಕಾರಿ ಕಚೇರಿ ಕಾರ್ಯಚಟುವಟಿಕೆಗಳನ್ನು ತಿಳಿದುಕೊಳ್ಳಲು ಇದು ಒಂದು ಉತ್ತಮ ಅವಕಾಶ ಎಂದರು.
ಪ್ರಬಂಧ ಸ್ಪರ್ಧೆ ವಿಜೇತ ಎಸ್.ಸಾಗರ್ ಮಾತನಾಡಿ, ‘ಜಿಲ್ಲಾಧಿಕಾರಿಯೊಂದಿಗೆ ಒಂದು ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಇಂತಹ ಕಾರ್ಯಕ್ರಮ ಆಯೋಜಿಸಿದ ಕರ್ನಾಟಕ ಸರ್ಕಾರ ಹಾಗೂ ಕೌಶಲಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಕೋಕಿಲ, ಸಹಾಯಕ ನಿರ್ದೇಶಕ ಕೃಷ್ಣ ಇತರರು ಇದ್ದರು.

ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಕೋಕಿಲ, ಸಹಾಯಕ ನಿರ್ದೇಶಕ ಕೃಷ್ಣ ಇತರರು ಇದ್ದರು.