ಹಾಸನ: ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಈಗಾಗಲೇ ಪ್ರಾರಂಭವಾಗಿದ್ದು, ಈ ಕರ್ತವ್ಯಕ್ಕೆ ನೇಮಿಸಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅತ್ಯಂತ ಜಾಗರೂಕತೆಯಿಂದ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗೆ ಎಂ.ಎಸ್ ಅರ್ಚನಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾಸನ ನಗರದ ಕಲಾಭವನದಲ್ಲಿ ಗುರುವಾರ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ವಿವಿಧ ಸಮಿತಿಗಳ ಮುಖ್ಯಸ್ಥರ ಹಾಗೂ ಸೆಕ್ಟರ್ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಈ ಬಾರಿ ವಿಧಾನಸಭೆ ಚುನಾವಣೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುತ್ತಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಪ್ರತಿ ವಾರ ಚುನಾವಣೆ ಬಗ್ಗೆ ಸಭೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅತೀ ಸೂಕ್ಷ್ಮವಾಗಿ ಗಮನವಹಿಸಿ ಮೇಲಧಿಕಾರಿಗಳಿಗೆ ವರದಿ ನೀಡಬೇಕು. ಚುನಾವಣೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು. ಈಗಿನಿಂದಲೇ ಎಲ್ಲಾ ಅಧಿಕಾರಿಗಳು ಚುನಾವಣೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿ. ಚೆಕ್‌ಪೋಸ್ಟ್ ಮತ್ತು ಮತಗಟ್ಟೆಗಳಲ್ಲಿ ನಿಗಾ ವಹಿಸಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಇದೇ ವೇಳೆ ಸಂಪನ್ಮೂಲ ವ್ಯಕ್ತಿಯಾದ ಶಶಿಶೇಖರ್ ರೆಡ್ಡಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ವಿವಿಧ ಸಮಿತಿಗಳ ಮುಖ್ಯಸ್ಥರ ಹಾಗೂ ಸೆಕ್ಟರ್ ಅಧಿಕಾರಿಗಳು, ವೆಚ್ಚ ವೀಕ್ಷಣಾ ತಂಡ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಎಲ್ಲಾ ನೋಡಲ್ ಅಧಿಕಾರಿಗಳಿಗೆ ತಮ್ಮ ಕೆಲಸ ಕಾರ್ಯಗಳ ಬಗ್ಗೆ ಸವಿವರವಾಗಿ ತಿಳಿಸಿದರು.
ಈ ಸಂದಭದಲ್ಲಿ ಅಪರ ಜಿಲ್ಲಾಧಿಕಾರಿ ಆನಂದ್ ಸೇರಿದಂತೆ ಇತರರು ಇದ್ದರು.