ಜಿಲ್ಲೆ

ಜಾಗೃತಿ ಮೂಡಿಸಿ ದೌರ್ಜನ್ಯ ತಡೆಗಟ್ಟಿ ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚನೆ

ತುಮಕೂರು : ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳು ದಾಖಲಾಗಿರುವ ಪ್ರದೇಶಗಳಲ್ಲಿ ಕಾನೂನು ಜಾಗೃತಿ ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣ ತಡೆಗಟ್ಟಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹೆಚ್ಚು ದೌರ್ಜನ್ಯ ಪ್ರಕರಣ ನಡೆದಿರುವ ಪ್ರದೇಶಗಳನ್ನು ಗುರುತಿಸಬೇಕು, ಬಳಿಕ ಆ ಪ್ರದೇಶಗಳಲ್ಲಿ ನಿರ್ದಿಷ್ಟ ದಿನದಂದು ಸಮಾಜ ಕಲ್ಯಾಣ, ಪೊಲೀಸ್, ಶಿಕ್ಷಣ ಇಲಾಖೆ ಸೇರಿ ಸಂಬಂಧಿಸಿದ ಎಲ್ಲ ಇಲಾಖಾಧಿಕಾರಿಗಳು ಸಮನ್ವಯ ಸಾಧಿಸಿ ಕಾನೂನು ಅರಿವು ಮೂಡಿಸಬೇಕು ಎಂದರು.

ದೌರ್ಜನ್ಯ ಅಧಿನಿಯಮ ಅನ್ವಯ ದಾಖಲಾದ ಪ್ರತಿಯೊಂದು ಪ್ರಕರಣಕ್ಕೂ ವಿಳಂಬ ಮಾಡದೆ ಪರಿಹಾರ ಮಂಜೂರು ಮಾಡಬೇಕು. ಪ್ರಕರಣಗಳ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರು ಮಾತನಾಡಿ, ದೌರ್ಜನ್ಯ ಪ್ರಕರಣಗಳು ನಡೆದಾಗ ಅಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ದೂರುಗಳನ್ನು ದಾಖಲಿಸಿಕೊಳ್ಳಲು ವಿಳಂಬ ಮಾಡುತ್ತಾರೆ. ಪ್ರಕರಣಗಳನ್ನು ದಾಖಲಿಸಿಕೊಳ್ಳುವಂತೆ ಒತ್ತಾಯ ಮಾಡುವ ಸ್ಥಿತಿ ಬಂದಿದೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಎಲ್ಲಿಯೇ ದೌರ್ಜನ್ಯ ಪ್ರಕರಣ ನಡೆದರೂ ತಕ್ಷಣವೇ ದೂರು ದಾಖಲಿಸಿಕೊಳ್ಳಲು ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್ ಮಾತನಾಡಿ, ಯಾವುದೇ ದೌರ್ಜನ್ಯ ಪ್ರಕರಣ ನಡೆದರೂ ತಕ್ಷಣವೇ ದೂರು ದಾಖಲಿಸಿಕೊಳ್ಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಳ್ಳುವಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ವಿಳಂಬ ತೋರುವುದಿಲ್ಲ. ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಮಾಡಿದರೆ ಅಂತಹವುಗಳನ್ನು ಗಮನಕ್ಕೆ ತಂದರೆ ತಕ್ಷಣವೇ ಪ್ರಕರಣ ದಾಖಲಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಉಪವಿಭಾಗಾಧಿಕಾರಿ ಅಜಯ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ನಂಜಯ್ಯ ಸೇರಿ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ನಿಯಮದ ಪ್ರಕಾರ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿಕೊಂಡು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು. ಇದರಿಂದ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಬಹುದು. ಆರೋಪಿಗಳು ಒಮ್ಮೆ ಶಿಕ್ಷೆ ಅನುಭವಿಸಿದರೆ ಮತ್ತೆ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗುವುದಿಲ್ಲ. ಡಾ.ಕೆ.ವಿದ್ಯಾಕುಮಾರಿ ಜಿಪಂ ಸಿಇಒ