ಜಿಲ್ಲೆ

ಜಿಕಾ ವೈರಸ್ ಸೋಂಕು ತಡೆಗೆ ಕ್ರಮ

ಬಾಗಲಕೋಟೆ: ಜಿಲ್ಲೆಯಲ್ಲಿ ಜಿಕಾ ವೈರಸ್ ಸೋಂಕು ರೋಗ ಹರಡದಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾಸ್ನೂನ್ ಅವಧಿಯಲ್ಲಿ ಸೊಳ್ಳೆಗಳ ಉತ್ಪಾದನೆ ಹೆಚ್ಚಾಗಿ ಕೀಟಜನ್ಯ ರೋಗಗಳು ಹರಡುವ ಸಾದ್ಯತೆ ಹೆಚ್ಚಾಗಿರುತ್ತದೆ. ಸೊಳ್ಳೆಗಳನ್ನು ನಾಶಮಾಡಲು ಕೀಟನಾಶಕ ಸಿಂಪಡಿಸಿ ದಿನನಿತ್ಯ ಸೊಳ್ಳೆ ಪರದೆಯನ್ನು ಉಪಯೋಗಿಸುವ ಮೂಲಕ ಮಾರಕ ರೋಗಗಳಿಂದ ರಕ್ಷಣೆ ಪಡೆಯಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ಜಿಕಾ ಒಂದು ಸೋಂಕು ರೋಗವಾಗಿದ್ದು, ಡೆಂಗೀ, ಚಿಕನಗುನ್ಯ ರೋಗ ಹರಡವ ಈಡಿಸ್ ಜಾತಿಯ ಸೊಳ್ಳೆಗಳು ಜಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ಸೊಳ್ಳೆಗಳು ಹಗಲಿನ ಹೊತ್ತು ಕಚ್ಚುತ್ತವೆ. ಇದಕ್ಕೆ ನೀರು ಶೇಖರೆಯಾಗುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮವಹಿಸಬೇಕು. ನಿರುಪಯುಕ್ತ ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳುವುದರ ಜೊತೆಗೆ ಶೀಘ್ರ ಹಾಗೂ ಸೂಕ್ತ ವಿಲೇವಾರಿಗೆ ಕ್ರಮವಹಿಸಬೇಕು.

ಮಳೆ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚತಕ್ಕದ್ದು. ಸಾರ್ವಜನಿಕರಲ್ಲಿ ಹಾಗೂ ಕೊಳವೆ ಬಾವಿಗಳಿಂದ ಹೆಚ್ಚುವರಿ ನೀರು ಸರಾಗವಾಗಿ ಹರಿದುಹೋಗುವಂತೆ ಸೂಕ್ತ ಚರಂಡಿ ವ್ಯವಸ್ಥೆ ಜೊತೆಗೆ ಚರಂಡಿಯೊಳಗೆ ಇರುವ ಹೂಳನ್ನು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಈಗಾಗಲೇ 17 ಲಕ್ಷ ಮನೆಗಳಿಗೆ ಭೇಟಿ ಲಾರ್ವಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಿದ್ದು, ಆರೋಗ್ಯ ಸಿಬ್ಬಂದಿಗಳ ಜೊತೆಗೆ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಬಳಕೆ ಮಾಡಿಕೊಂಡು ಮನೆ ಮನೆಗೆ ಭೇಟಿ ನೀಡಿ ಲಾರ್ವ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾ ಪಂಚಾಯತ ಸಿಇಓ ಶಶಿಧರ ಕುರೇರ ಮಾತನಾಡಿ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಸೋಂಕು ರೋಗದ ಬಗ್ಗೆ ಜಾಗೃತಿ ಮೂಡಿಸಿ ರೋಗ ತಡೆಗೆ ಕ್ರಮವಹಿಸಬೇಕು. ಈ ಕಾರ್ಯದಲ್ಲಿ ಆರೋಗ್ಯ ಇಲಾಖೆಯ ಜೊತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್, ನಗರಾಭಿವೃದ್ದಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೈಗಾರಿಕಾ ಇಲಾಖೆಗಳ ಪಾತ್ರವು ಮುಖ್ಯಮಾಗಿದೆ. ರೋಗದ ಪ್ರಕರಣ ಜಿಲ್ಲೆಯಲ್ಲಿ ಕಂಡುಬಂದಿರುವದಿಲ್ಲ. ಆದರೂ ಸಹ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಗಿರೀಶ ಸಂಗಮ ಮಾತನಾಡಿ ಜಿಕಾ ವೈರಸ್ ಸೋಂಕು ತಗಲಿದಾಗ ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು (ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸಾಮಾನ್ಯವಾಗಿ 2-7 ದಿನಗಳ ವರೆಗೆ ಇರುತ್ತದೆ. ಗರ್ಭಾವಸ್ಥೆಯಲ್ಲಿ ಜಿಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ ಬೆಳವಣಿಗೆ ದೋಷ ಕಂಡುಬರುತ್ತದೆ. ಲಕ್ಷಣಗಳು ಕಂಡುಬಂದ ತಕ್ಷಣ ನಿರ್ಲಕ್ಷ ವಹಿಸದೇ ಸರಕಾರಿ ಆಸ್ಪತ್ರೆಗಳಿಗೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಸಂಪೂರ್ಣ ಉಚಿತವಾಗಿರುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಚಾರದ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ದಯಾನಂದ ಕರೇನ್ನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಸೇರಿದಂತೆ ಆಯಾ ತಾಲೂಕಿನ ವೈದ್ಯಾಧಿಕಾರಿಗಳು ಉಪಸ್ಥಿರಿದ್ದರು.