ಜಿಲ್ಲೆ

ಜಿಲ್ಲಾ ಕೇಂದ್ರದಲ್ಲಿ ಸಚಿವ ಸಂಪುಟ ಸಭೆ ನಡೆಸಿ

*ರೈತ ಸಂಘದ ರಾಜ್ಯ ಉಪಾಧ್ಯಕ್ಷ ಡಾ.ಗುರುಪ್ರಸಾದ್ ಆಗ್ರಹ

ಚಾಮರಾಜನಗರ: ಜಿಲ್ಲೆಯ ಶ್ರೀಮಲೆ ಮಹದೇಶ್ವರಸ್ವಾಮಿ ಬೆಟ್ಟದಲ್ಲಿ ಆಯೋಜಿಸಲು ನಿರ್ಧರಿಸಿರುವ ಸಚಿವ ಸಂಪುಟ ಸಭೆಯನ್ನು ಜಿಲ್ಲಾ ಕೇಂದ್ರದಲ್ಲಿ ಆಯೋಜಿಸುವಂತೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಡಾ.ಗುರುಪ್ರಸಾದ್ ಆಗ್ರಹಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಸಮಸ್ಯೆಗಳನ್ನು ಆಲಿಸದೇ ಮಲೆಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಲು ನಿರ್ಧರಿಸಿರುವುದು ಖಂಡನೀಯ. ಕಾಟಾಚಾರಕ್ಕೆ ಸಚಿವ ಸಂಪುಟ ಸಭೆಯನ್ನು ನಡೆಸಲು ಧಾರ್ಮಿಕ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸರ್ಕಾರ ರೈತರ ಸಭೆ ಕರೆದು, ಸಮಸ್ಯೆಗಳನ್ನು ಆಲಿಸದಿದ್ದರೇ, ಸಚಿವ ಸಂಪುಟದ ದಿನವನ್ನು ಕರಾಳ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.

ರೈತರಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಟ್ರಾನ್ಸಾರ್ಮರ್‌ಗಳನ್ನು ನೀಡುವ ನಿರ್ಣಯವನ್ನು ಕೈಗೊಳ್ಳಬೇಕು. ವನ್ಯಜೀವಿಗಳ ಹಾವಳಿಯಿಂದ ನಷ್ಟ ಅನುಭವಿಸುವ ರೈತರಿಗೆ ನೆರವಾಗಬೇಕು. ಕಬಿನಿ ಎರಡನೇ ಹಂತವನ್ನು ಜಾರಿಗೊಳಿಸಬೇಕು. ತೇಗದ ಮರಗಳನ್ನು ಮಾರಾಟ ಮಾಡಲು ಇರುವ ನಿರ್ಬಂಧವನ್ನು ತೆಗೆದು ಹಾಕಬೇಕು. ತಾಲೂಕಿಗೊಂದು ಕೋಲ್ಡ್ ಸ್ಟೋರೇಜ್ ಸ್ಥಾಪಿಸಲು ನೆರವಾಗಬೇಕು.ಶಾಶ್ವತ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ ಮಾತನಾಡಿ, ಗುಂಡ್ಲುಪೇಟೆ ತಾಲೂಕಿನ ವ್ಯಾಪ್ತಿಯಲ್ಲಿರುವ ಕೆರೆಗಳು ಬರಿದಾಗಿದ್ದು, ಪ್ರಾಣಿ-ಪಕ್ಷಿಗಳಿಗೂ ಕುಡಿಯಲು ನೀರು ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆರೆಗಳಿಗೆ ನೀರು ತುಂಬಿಸುವಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದರು.

ಗೋಷ್ಠಿಯಲ್ಲಿ ಹಸಿರು ಸೇನೆ ಜಿಲ್ಲಾಧ್ಯಕ್ಷ ಚಿಕ್ಕಣ್ಣ ಹಿರಿಕಾಟಿ, ಸಂಘದ ತಾಲೂಕು ಖಜಾಂಚಿ ಲಿಂಗಸ್ವಾಮಿ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಹೊಸೂರು ಮಹೇಶ್ ಹಾಜರಿದ್ದರು.