ಹನೂರು: ಪಟ್ಟಣದ ಶ್ರೀ ಮಲೆಮಹದೇಶ್ವರ ಕ್ರೀಡಾಂಗಣದಲ್ಲಿ ಗುರುವಾರ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಜಯಗಳಿಸಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್, ಖೋಖೋ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದರೆ, ಬಾಲಕರ 14 ವರ್ಷದೊಳಗಿನ ಕ್ರೀಡಾಕೂಟದಲ್ಲಿ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ಧನರಾಜು ತಿಳಿಸಿದರು.
ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ವಿಜಯವಾಣಿಯೊಂದಿಗೆ ಮಾತನಾಡಿ, ಗುಡ್ಡಗಾಡು ಪ್ರದೇಶ ಹಾಗೂ ಉತ್ತಮ ಪರಿಸರದಿಂದ ಕೂಡಿರುವ ಮ.ಬೆಟ್ಟದ ತಪ್ಪಲಿನ ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿದ್ದು, ಸೃಜನಶೀಲತೆ ಹೊಂದಿದ್ದಾರೆ. ಶ್ರೀ ಮಠದ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳು ಬಡ ಕುಟುಂಬಕ್ಕೆ ಸೇರಿದ್ದಾರೆ. ಉಚಿತವಾಗಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ.
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇದಕ್ಕೆ ಅನುಗುಣವಾಗಿ ಉತ್ತಮ ತರಬೇತಿ ನೀಡುವುದರ ಮೂಲಕ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಉತ್ತೇಜನ ನೀಡಲಾಗುತ್ತಿದೆ. ಮಕ್ಕಳು ಸ್ವಯಂ ಪ್ರೇರಿತವಾಗಿ ಕ್ರೀಡೆಗಳಲ್ಲಿ ಭಾಗವಹಿಸುವ ಮನೋಭಾವನೆ ರೂಢಿಸಿಕೊಂಡಿದ್ದಾರೆ. ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಂಸ್ಥೆಯ ಮಕ್ಕಳು ಜಯಗಳಿಸಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲೂ ಯಶಸ್ಸು ಲಭಿಸಲಿ ಎಂದು ಆಶಿಸಿದರು.
ದೈಹಿಕ ಶಿಕ್ಷಣ ಶಿಕ್ಷಕ ಧನರಾಜ್, ಶಿಕ್ಷಕ ಮಹೇಶ್, ನಾಗರಾಜು, ನಾಗರತ್ನಾ ಇದ್ದರು.