ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನವಾಗಬೇಕು ಹಾಗೂ ರಾಜ್ಯದಲ್ಲಿಯೇ ಮತದಾನ ಪ್ರಮಾಣದಲ್ಲಿ ಜಿಲ್ಲೆ ಮುಂಚೂಣಿಯಲ್ಲಿರಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮುಖ್ಯಸ್ಥೆ ಬಿ.ಆರ್. ಪೂರ್ಣಿಮಾ ಅವರು ಹೇಳಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ವಿಶೇಷ ಚೇತನರು ಮತ್ತು ಹಿರಿಯ ನಾಗರಿಕ ಇಲಾಖೆ ವತಿಯಿಂದ ವಿಶೇಷ ಚೇತನರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ.100 ರಷ್ಟು ಮತದಾನವಾಗುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸ್ವೀಪ್ ಚಟುವಟಿಕೆಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಬೈಕ್‌ರ‌್ಯಾಲಿ ಮೂಲಕ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಲ್ಲಿ ಮತ ಚಲಾಯಿಸುವಂತೆ ಅರಿವು ಮೂಡಿಸಲಾಗುತ್ತಿದೆ. ಮತಗಟ್ಟೆಗಳಲ್ಲಿ ವಿಶೇಷ ಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಮತದಾನ ಮಾಡಲು ವೀಲ್‌ಚೇರ್, ಶೆಡ್, ಕುಡಿಯುವ ನೀರು, ಸಹಾಯಕರು, ಬ್ರೈನ್ ಲಿಪಿ ಅಳವಡಿಕೆ ಮುಂತಾದ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಲು ಸಾಧ್ಯವಾಗದಿದ್ದರೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೈಕ್‌ರ‌್ಯಾಲಿಯು ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಎನ್.ಆರ್. ವೃತ್ತದ ಮೂಲಕ ಹೇಮಾವತಿ ಪ್ರತಿಮೆವರೆಗೆ ಸಂಚರಿಸಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು. ಕಲಾ ತಂಡದವರು ಬೀದಿ ನಾಟಕ ಪ್ರದರ್ಶನ ಹಾಗೂ ಮತದಾನ ಗೀತೆಗಳನ್ನು ಹಾಡುವ ಮೂಲಕ ಕಡ್ಡಾಯ ಮತದಾನದ ಬಗ್ಗೆ ಅರಿವು ಮೂಡಿಸಿದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪರಪ್ಪಸ್ವಾಮಿ, ಜಿಲ್ಲಾ ಕಾರ್ಮಿಕ ಕಲ್ಯಾಣಾಧಿಕಾರಿ ಅನುಪಮಾ ಹಾಗೂ ಮತ್ತಿತರರು ಹಾಜರಿದ್ದರು.