ಬಾಗಲಕೋಟೆ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಶಾಸಕ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಗಾಂಧಿ ಹಾಗೂ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.
ವಿವಿಧ ಧರ್ಮದ ಗುರುಗಳಾದ ಸಂಸ್ಕøತ ಪಂಡಿತ ಬಿಂಧುಮಾಧವಾಚಾರ್ಯ ನಾಗಸಂಪಗಿ ಭಗವದ್ಗೀತಾ, ಪ್ರಕಾಶ ಮಾರೋಸ್ ಬೈಬಲ್ ಹಾಗೂ ಆಸೀಪ್ ಎಲ್. ಮುದಗಲ್ಲ ಅವರು ಕುರಾನ್ ಕುರಿತು ಉಪದೇಶ ನೀಡಿದರು. ಬಸವೇಶ್ವರ ಕಲಾ ಮಹಾವಿದ್ಯಾಲಯದ ಡಾ.ಆರ್.ಎಂ.ಬೆಣ್ಣೂರ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ವೈಷ್ಣವ ಜನತೋತನೆ, ರಘುಪತಿ ರಾಘವ ರಾಜಾರಾಮ ಗೀತೆ ಹಾಡಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹನಮರಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಜಿಲ್ಲಾ ಆಯುಷ ಅಧಿಕಾರಿ ಅಕ್ಕಮಹಾದೇವಿ ಗಾಣಿಗೇರ, ಜಿಲ್ಲಾ ವಾರ್ತಾಧಿಕಾರಿ ಕಸ್ತೂರಿ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮೀನ್ ಕಿಲ್ಲೇದಾರ ಕಾರ್ಯಕ್ರಮ ನಿರೂಪಿಸಿದರು.