ಚಿತ್ರದುರ್ಗ: ಸರ್ಕಾರಿ, ಸಂಘ-ಸಂಸ್ಥೆಗಳ ಕಚೇರಿ, ವಿವಿಧ ವೃತ್ತಗಳು ಒಳಗೊಂಡು ಜಿಲ್ಲಾದ್ಯಂತ ಹಲವೆಡೆ ಶುಕ್ರವಾರ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನ ಆಚರಿಸಲಾಯಿತು.
ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ದಿನಾಚರಣೆಯಲ್ಲಿ ಭೀಮ್ ರಾವ್ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಎಸ್‌ಪಿ ರಂಜಿತ್‌ಕುಮಾರ್ ಬಂಡಾರು, ಎಡಿಸಿ ಬಿ.ಟಿ.ಕುಮಾರಸ್ವಾಮಿ ಪುಷ್ಪನಮನದೊಂದಿಗೆ ಗೌರವ ಸಲ್ಲಿಸಿದರು.
ಇದೇ ವೇಳೆ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ನೂರಾರು ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಎಸ್ಸಿ-ಎಸ್ಟಿ ಒಳಗೊಂಡು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.