ಚಿಕ್ಕಬಳ್ಳಾಪುರ : ಜಿಲ್ಲಾದ್ಯಂತ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ್ದು ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಪಡಿಸಲಾಯಿತು.
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಗರದ ಸರ್ ಎಂ.ವಿ.ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರೆದ ವಾಹನದಲ್ಲಿ ತೆರಳಿ, ವಿವಿಧ ಪಥ ಸಂಚಲನ ತಂಡಗಳ ಗೌರವವಂದನೆ ಸ್ವೀಕರಿಸಿದರು.
ಬಳಿಕ ಪೊಲೀಸ್, ಜಿಲ್ಲಾ ಸಶಸ ಮೀಸಲು ಪಡೆ, ಗೃಹರಕ್ಷಕ ದಳ ಸಿಬ್ಬಂದಿ ಪಥಸಂಚಲನ ನಡೆಯಿತು.
ಐಎಎಸ್, ಕೆಎಎಸ್, ಬ್ಯಾಂಕಿಂಗ್ ಸೇರಿ ಎಲ್ಲ ಪರೀಕ್ಷೆಗಳಲ್ಲೂ ಕನ್ನಡ ಭಾಷೆಯ ಆಯ್ಕೆ ಇರಬೇಕು. ಇದು ಜನರಲ್ಲಿನ ಮಾತೃಭಾಷೆಯ ಮೇಲಿನ ಒಲವು ಹೆಚ್ಚಿಸುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ ಸುಧಾಕರ್ ಅಭಿಪ್ರಾಯಪಟ್ಟರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಈ ನೆಲದ ಭಾಷೆಯ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದರು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಅನೇಕ ಮಹನೀಯರು ಕೊಡುಗೆ ಇದೆ. ಈಗಲೂ ದೇಶ ವಿದೇಶಗಳಲ್ಲೂ ವಿಶಿಷ್ಟ ಸಾಧನೆಯ ಮೂಲಕ ಹಲವರು ಗಮನ ಸೆಳೆಯುತ್ತಿದ್ದಾರೆ. ಇದನ್ನು ಯುವ ಜನತೆ ಮಾದರಿಯಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.
ಕನ್ನಡವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಡಿಜಿಟಲ್ ಗ್ರಂಥಾಲಯಗಳನ್ನು ಸ್ಥಾಪಿಸುವ ಅಗತ್ಯವಿದೆ. ಇದರ ಮೂಲಕ ದೇಶ ವಿದೇಶಗಳಲ್ಲಿ ಭಾಷೆಯ ಕಂಪು ಪಸರಿಸುವಂತಾಗಬೇಕು. ಇದರಿಂದ ಭಾಷಾ ಶ್ರೀಮಂತಿಕೆ ಹೆಚ್ಚಾಗುತ್ತದೆ ಎಂದು ಹೇಳಿದರು.ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣದ ನೂತನ ನೀತಿಯಲ್ಲಿ ಮಾತೃ ಭಾಷೆಗೆ ಆದ್ಯತೆ ನೀಡುವುದೇ ಮುಖ್ಯ ಉದ್ದೇಶವಾಗಿದೆ. ಪ್ರಾದೇಶಿಕತೆಗೆ ಹೆಚ್ಚಿನ ಒತ್ತನ್ನು ನೀಡುವ ಉದ್ದೇಶದಿಂದ 19 ಗಡಿ ಜಿಲ್ಲೆಗಳನ್ನು ಮತ್ತು 52 ಗಡಿ ತಾಲೂಕುಗಳ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. 844 ಸ್ಮಾರಕಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ನಗರಸಭೆ ಅಧ್ಯಕ್ಷ ಆನಂದ ಬಾಬು ರೆಡ್ಡಿ, ಜಿಲ್ಲಾಧಿಕಾರಿ ಆರ್.ಲತಾ, ಸಿಇಒ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್ ಮತ್ತಿತರರು ಇದ್ದರು.