ಜಿಲ್ಲೆ

ಜಿಲ್ಲೆ ಅಭಿವೃದ್ಧಿಗೆ ಸರ್ಕಾರ ಬದ್ಧ

ಚಾಮರಾಜನಗರ: ಜಾನಪದ ಕಲೆ, ಸಂಸ್ಕೃತಿಗಳ ತವರೂರಾಗಿರುವ ಗಡಿ ಜಿಲ್ಲೆ ಚಾಮರಾಜನಗರದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತಿಳಿಸಿದರು.

ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಭಾನುವಾರ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಸಂವಿಧಾನ ಕರಡು ಸಮಿತಿ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ಅವರು ಜಗತ್ತಿಗೆ ಮಾದರಿಯಾಗುವ ಸಂವಿಧಾನ ರಚಿಸಿ ನಮಗೆ ಕೊಡುಗೆಯಾಗಿ ನೀಡಿದ್ದಾರೆ. ದೇಶದ ಪ್ರತಿ ನಾಗರಿಕನಿಗೂ ಸ್ವಾತಂತ್ರ್ಯ, ಸಮಾನತೆ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಹಕ್ಕುಗಳನ್ನು ನೀಡವುದು ಸಂವಿಧಾನದ ಪ್ರಮುಖ ಉದ್ದೇಶ ಎಂದರು.

ಜಿಲ್ಲೆಯ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದರು.

ಗಣರಾಜ್ಯೋತ್ಸವ ಸಂದೇಶ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಸಂಸದ ಸುನಿಲ್ ಬೋಸ್, ಎಂ.ಎಸ್.ಐ.ಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಸೇರಿದಂತೆ ಇತರ ಗಣ್ಯರು ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್. ಸುರೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್, ನಗರಸಭೆ ಉಪಾಧ್ಯಕ್ಷೆ ಮಮತಾ, ಸದಸ್ಯ ಚಂದ್ರಶೇಖರ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ಶಶಿಧರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ತಹಸೀಲ್ದಾರ್ ಗಿರಿಜಾ ಇತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ

ಕಾರ್ಯಕ್ರಮದಲ್ಲಿ ಬಂಜಾರ ಇಂಡಿಯನ್ ಶಾಲೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಸಂತ ಜೋಸೆಫರ ಪ್ರೌಢಶಾಲೆ ಮತ್ತು ಜೆ.ಎಸ್.ಎಸ್. ಬಾಲಕಿಯರ ಪ್ರೌಢಶಾಲೆ ಮಕ್ಕಳಿಂದ ದೇಶಭಕ್ತಿ ಸಾರುವ ನೃತ್ಯ ಪ್ರದರ್ಶನ ಆಕರ್ಷಕವಾಗಿ ಮೂಡಿಬಂತು. ಸಾರಿಗೆ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ರಸ್ತೆ ಸುರಕ್ಷತೆ ಅರಿವು ಕುರಿತ ಅಣಕು ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

ಆಕರ್ಷಕ ಪಥ ಸಂಚಲನ

ಪೊಲೀಸ್ ತುಕಡಿಗಳು ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪಥಸಂಚಲನದಲ್ಲಿ ಪಾಲ್ಗೊಂಡ ಪೊಲೀಸ್, ಅರಣ್ಯ, ಅಬಕಾರಿ, ಗೃಹರಕ್ಷಕ ದಳ ಹಾಗೂ ವಿವಿಧ ಶಾಲೆಗಳ ಎನ್‌ಸಿಸಿ, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿಗೆ ಗಣ್ಯರು ಸ್ಮರಣಿಕೆ ನೀಡಿ ಗೌರವಿಸಿದರು. ಆಕಸ್ಮಿಕ ಅಪಘಾತದಲ್ಲಿ ಮರಣ ಹೊಂದಿದವರ ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರಿಗೆ ಪ್ರಮಾಣಪತ್ರ ನೀಡಲಾಯಿತು