ಜಿಲ್ಲೆ

ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿ

Dharwad

ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಹು-ಧಾ ಪೂರ್ವ ಕ್ಷೇತ್ರ ಸೇರಿದಂತೆ ಎಲ್ಲ ಏಳೂ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಧಾರವಾಡ ಕಮಲಪಡೆಯ ಗಂಡುಮೆಟ್ಟಿನ ನೆಲ ಎಂಬುದನ್ನು ಸಾಬೀತುಪಡಿಸೋಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಸೋಮವಾರ ಆಯೋಜಿಸಿದ್ದ ಬಿಜೆಪಿ ಧಾರವಾಡ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬಿಜೆಪಿ ಬಲಾಢ್ಯವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆ, ಸಾಧನೆಗಳ ಬಗ್ಗೆ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಬೇಕಿದೆ. ಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳು ಬಿಜೆಪಿ ವಶವಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಹಿಮಾಚಲ ಹಾಗೂ ಗುಜರಾತ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ದೇಶದಲ್ಲಿ ಕಾಂಗ್ರೆಸ್ ಅಧೋಗತಿಗೆ ಇಳಿದಿದೆ. ಆ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಯಾವುದೇ ಸುಳಿವು ಇಲ್ಲ. ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

ಇಡಿ ವಿಶ್ವದಲ್ಲಿಯೇ ಬಿಜೆಪಿ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ. ಈ ಪಕ್ಷಕ್ಕೆ ಪರ್ಯಾಯ ರಾಜಕೀಯ ಪಾರ್ಟಿ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪರ್ಯಾಯ ನಾಯಕರು ಇಲ್ಲ ಎಂದು ಹೇಳಿದರು.

ಬಿಜೆಪಿಗೆ ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಅರಿವು ಇದೆ. ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿದೆ. ಈ ಬಗ್ಗೆ ಈಗಾಗಲೇ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ರ್ಚಚಿಸಿದ್ದು, ಶೀಘ್ರ ಬೇಡಿಕೆ ಈಡೇರುವ ಭರವಸೆ ಇದೆ ಎಂದು ತಿಳಿಸಿದರು.

ಧಾರವಾಡ ಗ್ರಾಮಾಂತರ ಅಧ್ಯಕ್ಷ ಬಸವರಾಜ ಕುಂದಗೋಳಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಸಿ.ಎಂ. ನಿಂಬಣ್ಣವರ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ, ಲಿಂಗರಾಜ ಪಾಟೀಲ, ಎಂ.ಆರ್. ಪಾಟೀಲ, ಈರಣ್ಣ ಜಡಿ, ಶಣ್ಮುಖ ಗುರಿಕಾರ ಹಾಗೂ ಇತರರು ಉಪಸ್ಥಿತರಿದ್ದರು.