ಜಿಲ್ಲೆ

ಜಿಲ್ಲೆಯನ್ನು ಬರ ಪೀಡಿತ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಪ್ರತಿಭಟನೆ

ಚಿತ್ರದುರ್ಗ: ಜಿಲ್ಲೆಯ ಆರು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ರಾಜ್ಯಸರ್ಕಾರವನ್ನು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ಜಿಲ್ಲೆಯ ರೈತರಿಗೆ ಬರ ಪರಿಹಾರ ಮೊತ್ತ ಕೂಡಲೇ ವಿತರಿಸಬೇಕು.

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಮಾನದಂಡಗಳನ್ನು ಬದಲಾಯಿಸಿ ರೈತರ ಖಾತೆಗಳಿಗೆ ಹಣ ಜಮಾ ಮಾಡಬೇಕು. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕು. ಗಡಿ ಗುರುತು ಜಂಟಿ ಸರ್ವೆ ತುರ್ತಾಗಿ ಆಗಬೇಕು.ಅರಣ್ಯ ಹಕ್ಕು ಸಾಗುವಳಿ ಮತ್ತು ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸುವ ಯಾವ ಕ್ರಮಕ್ಕೂ ಮುಂದಾಗಬಾರದೆಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಸಂಘದ ಜಿಲ್ಲಾ ಕಾರ‌್ಯದರ್ಶಿ ಜಿ.ಸಿ.ಸುರೇಶ್‌ಬಾಬು ಮಾತನಾಡಿ ಅತಿಯಾಗಿ ಮಳೆ ಸುರಿದ ಪರಿಣಾಮ ಜಿಲ್ಲೆಯಲ್ಲಿ ಎಲ್ಲ ಬೆಳೆಗಳು ನಾಶವಾಗಿವೆ. ಶೇಂಗಾ, ಈರುಳ್ಳಿ, ಮೆಕ್ಕೆಜೋಳ ಬೆಳೆಗಳನ್ನೇ ನಂಬಿದ್ದ ರೈತರು 40-50 ಸಾವಿರ ರೂ.ನಷ್ಟ ಅನುಭವಿಸಿದ್ದಾರೆ. ಆದ್ದರಿಂದ ಕೂಡಲೇ ಜಿಲ್ಲೆಯನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ರಾಜ್ಯಸರ್ಕಾರಕ್ಕೆ ವರದಿ ಕಳಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಪ್ರತಿಭಟನಾ ನಿರತರು ಮನವಿ ಸಲ್ಲಿಸಿದರು. ಜಾಫರ್‌ಷರೀಫ್,ಟಿ.ಆರ್.ಉಮಾಪತಿ, ಸತ್ಯಕೀರ್ತಿ, ಇರ್ಫಾನ್, ಮಾರಣ್ಣ ಇತರರು ಇದ್ದರು.