ಚಿಕ್ಕಬಳ್ಳಾಪುರ : ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ಧಾರ್ಮಿಕ ವಿಶೇಷ ಪೂಜಾ ಕಾರ್ಯಕ್ರಮಗಳೊಂದಿಗೆ ಹನುಮ ಜಯಂತಿಯನ್ನು ಭಾನುವಾರ ಸಂಪ್ರದಾಯ ಬದ್ಧವಾಗಿ ಆಚರಿಸಲಾಯಿತು.
ನಗರದ ಪಂಚಮುಖಿ ಆಂಜನೇಯ, ಅಭಯ ಆಂಜನೇಯ, ಪೇಟೆ ಆಂಜನೇಯ ಸೇರಿ ವಿವಿಧ ದೇವಾಲಯಗಳಲ್ಲಿ ವಿಶೇಷ ಅಭಿಷೇಕ, ಅಲಂಕಾರ ಮಾಡಲಾಯಿತು. ಭಕ್ತರು ಬೆಳಗ್ಗೆಯಿಂದಲೇ ಆಲಯಗಳಿಗೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ನಾನಾ ಭಜನಾ ತಂಡಗಳಿಂದ ಭಕ್ತಿಗೀತೆಗಳ ಗಾಯನ ಹಮ್ಮಿಕೊಳ್ಳಲಾಗಿತ್ತು. ಆಲಯದ ಆವರಣದಲ್ಲಿಯೇ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸಲಾಯಿತು. ತಾಲೂಕಿನ ಸೂಲಾಲಪ್ಪ ದಿನ್ನೆ ಬಳಿ ಇರುವ ಶ್ರೀ ವೀರಾಂಜನೇಯಸ್ವಾಮಿ ಆಲಯದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ದೇವರಿಗೆ ವಿಶೇಷ ಅಭಿಷೇಕ ನೆರವೇರಿಸಿದರು. ಬೆಳ್ಳಿ ಆಭರಣ ಸಮೇತ ಆಂಜನೇಯಸ್ವಾಮಿಗೆ ಅಲಂಕಾರ ಮಾಡಲಾಗಿತ್ತು. ಶ್ರೀ ವೀರಾಂಜನೇಯಸ್ವಾಮಿ ಜತೆಗೆ ಆಲಯದಲ್ಲಿನ ಶ್ರೀ ಲಕ್ಷ್ಮೀನರಸಿಂಹಸ್ವಾಮಿ, ಗಣಪತಿಗೆ ಪೂಜೆ ಮಾಡಿದ ಬಳಿಕ ಹೋಮ ನೆರವೇರಿಸಲಾಯಿತು.
ನಾನಾ ಕಾರಣಗಳ ಹಿನ್ನೆಲೆಯಲ್ಲಿ ಜಗತ್ತು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ. ಇವುಗಳ ಪರಿಹಾರದ ಜತೆಗೆ ಲೋಕ ಕಲ್ಯಾಣಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರುಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಭಾಗವಹಿಸುವುದರಿಂದ ಸಕಾರಾತ್ಮಕ ಮನೋಭಾವನೆ ಬೆಳೆಯುತ್ತದೆ. ಇದರಿಂದ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.
ಪಾಲಕರು ಮಕ್ಕಳಲ್ಲಿ ಮಾನವೀಯ ಮೌಲ್ಯ, ಆಧ್ಯಾತ್ಮಿಕ ಚಿಂತನೆಗಳನ್ನು ಬೆಳೆಸಬೇಕು. ಸತ್ಕಾರ್ಯದಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಅಗತ್ಯ ಮಾರ್ಗದರ್ಶನ ನೀಡಬೇಕು. ಒಳ್ಳೆಯ ಕುಟುಂಬಗಳ ಹೆಚ್ಚಳದಿಂದ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ, ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಬಿಜಿಎಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಎನ್.ಶಿವರಾಮರೆಡ್ಡಿ, ಮುಖಂಡರಾದ ಆಂಜನೇಯರೆಡ್ಡಿ, ಡಾ ಕೆ.ಪಿ.ಶ್ರೀನಿವಾಸಮೂರ್ತಿ ಮತ್ತಿತರರು ಇದ್ದರು.