ಮೈಸೂರು: ಕಕ್ಷಿದಾರರಿಗೆ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅನುಕೂಲವಾಗುವಂತೆ ಜುಲೈ 8ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್.ಸಂಗೇಶ್ರೀ ತಿಳಿಸಿದರು.
ಲೋಕ ಅದಾಲತ್‌ನಿಂದ ರಾಜಿ ಮಾಡಿಕೊಂಡರೆ ಶೇ.100ರಷ್ಟು ನ್ಯಾಯಾಲಯ ಶುಲ್ಕ ಹಿಂದಿರುಗಿಸಲಾಗುವುದು. ಆದ್ದರಿಂದ ಇದರ ಅನುಕೂಲವನ್ನು ಕಕ್ಷಿದಾರರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲೆಯಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಈ ಅದಾಲತ್‌ನಲ್ಲಿ ರಾಜಿ ಆಗಬಹುದಾದ ಮತ್ತು ವ್ಯಾಜ್ಯ ಪೂರ್ವ 7516 ಪ್ರಕರಣಗಳನ್ನು ವಿಲೇವಾರಿ ಮಾಡಲು ಗುರುತಿಸಲಾಗಿದೆ. ಮೈಸೂರು ನಗರ ಮತ್ತು ತಾಲೂಕುಗಳ ನ್ಯಾಯಾಲಯಗಳಲ್ಲಿ 54,096 ಸಿವಿಲ್ ಪ್ರಕರಣಗಳು ಮತ್ತು 57,833 ಕ್ರಿಮಿನಲ್ ಪ್ರಕರಣಗಳು ಸೇರಿ ಒಟ್ಟು 1,11,929 ಪ್ರಕರಣಗಳ ವಿಚಾರಣೆ ಬಾಕಿ ಇವೆ. ಅವುಗಳಲ್ಲಿ 11,702 ಇತ್ಯರ್ಥವಾಗುವ ಸಂಭವಿದ್ದು, ಅದಾಲತ್‌ನಲ್ಲಿ ವಿಲೇವಾರಿ ಮಾಡಲು 7.516 ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಮೋಟಾರು ವಾಹನ ಅಪಘಾತ ಪ್ರಕರಣ 405, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣ 236, ಚೆಕ್ ಬೌನ್ಸ್ ಪ್ರಕರಣ 2410, ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣ 4203, ವ್ಯಾಜ್ಯಪೂರ್ವ ಪ್ರಕರಣ 262 ಇವೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ.ದಿನೇಶ್, ಮೈಸೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಮಹದೇವ ಸ್ವಾಮಿ, ಉಪಾಧ್ಯಕ್ಷ ಪುಟ್ಟ ಸಿದ್ದೇಗೌಡ, ಕಾರ್ಯದರ್ಶಿ ಎಸ್.ಉಮೇಶ್ ಇದ್ದರು.