ಮೈಸೂರು: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಗರದ ಖಾಸಗಿ ಹೋಟೆಲ್‌ನಲ್ಲಿ ಜೆಡಿಎಸ್ ಶಾಸಕರು, ಮಾಜಿ ಶಾಸಕರು ಹಾಗೂ ಮುಖಂಡರ ಜತೆಗೆ ಮಂಗಳವಾರ ಸಭೆ ನಡೆಸಿದರು.
ಶಾಸಕ ಜಿ.ಡಿ.ಹರೀಶ್‌ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಶಾಸಕರಾದ ಕೆ.ಮಹದೇವ್, ಅಶ್ವಿನ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿ ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧ ಸಭೆ ನಡೆಸಿದ್ದು, ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಸದಸ್ಯರ ನೇಮಕ, ಚುನಾವಣೆ ಸಂಬಂಧ ಚರ್ಚೆ ಆಗಿದೆ. ಮಾರ್ಚ್ 14ರೊಳಗೆ ಡಿಜಿಟಲ್ ಮೂಲಕ ಪಕ್ಷದ ಸದಸ್ಯತ್ವ, ನೇಮಕ ಮಾಡುವುದಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಸ್ಥಳೀಯ ಚುನಾವಣೆಗಳಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳು ಇರುತ್ತಾರೆ. ಸೂಕ್ತ ವ್ಯಕ್ತಿಗಳ ಆಯ್ಕೆ ಮಾಡುವ ನಿಟ್ಟಿನಲ್ಲಿ ಸ್ಥಳೀಯ ನಾಯಕರ ಸಲಹೆ ಪಡೆಯಲಾಗುವುದು. ಸ್ಥಳೀಯ ಚುನಾವಣೆಯಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಎರಡು ಪಕ್ಷದ ನಾಯಕರು ಚರ್ಚೆ ಮಾಡಲಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರು ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ನರೇಂದ್ರ ಮೋದಿ, ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಲ ತುಂಬಿದ್ದಾರೆ. ಯಾವುದೇ ಗೊಂದಲ ಉಂಟಾಗದ ರೀತಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವ ಬಗ್ಗೆ ಚರ್ಚೆ ನಡೆದಿಲ್ಲ. ಈ ಸ್ಥಾನದಲ್ಲಿ ಕುಮಾರಸ್ವಾಮಿ ಅವರೇ ಮುಂದುವರಿಯಬೇಕು ಎನ್ನುವುದು ಎಲ್ಲರ ಅಭಿಪ್ರಾಯವಾಗಿದೆ. ನಾನು ಈ ಸ್ಥಾನದ ಆಕಾಂಕ್ಷಿಯಲ್ಲ ನಾನು ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತ. ಜೆಡಿಎಸ್ ಅಧಿಕಾರ ಅನುಭವಿಸಿದ್ದು ಕಡಿಮೆ. ನಮ್ಮ ಕಾರ್ಯಕರ್ತರಿಗೆ ನ್ಯಾಯ ಒದಗಿಸಬೇಕು. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ ಎಂದರು.
ಜೆಡಿಎಸ್‌ನಲ್ಲಿ ಕೆಲ ಬದಲಾವಣೆ ಆಗಬೇಕು. ಆ ಬಗ್ಗೆ ಗಮನ ಹರಿಸಿದ್ದು, ಯಾರು ಪಕ್ಷದ ಬೆಳವಣಿಗೆಗೆ ಹೋರಾಟ ಮಾಡುತ್ತಾರೋ ಅಂತಹ ಸಕ್ರಿಯ ಕಾರ್ಯಕರ್ತರನ್ನು ಈ ಬಾರಿ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.