ಹನೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಅಳವಡಿಸಿರುವ ತಂತಿಗಳನ್ನು (ಕೇಬಲ್) ಬದಲಾಯಿಸುವುದರ ಮೂಲಕ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ಮಂಗಳವಾರ ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಡೇಗೌಡನ ದೊಡ್ಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಗ್ರಾಮವು ಮಲೆಮಹದೇಶ್ವರ ವನ್ಯಜೀವಿ ಧಾಮದ ಅಂಚಿನಲ್ಲಿದೆ. ಇಲ್ಲಿ 40ಕ್ಕೂ ಹೆಚ್ಚು ಕುಟುಂಬಗಳಿದ್ದು, ಸುಮಾರು 170 ಜನಸಂಖ್ಯೆಯನ್ನು ಹೊಂದಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿದೆ. ಆದರೆ ಟ್ರಾನ್ಸ್‌ಫಾರ್ಮರ್‌ನಲ್ಲಿ ಅಳವಡಿಸಿರುವ ವಿದ್ಯುತ್ ತಂತಿಗಳು ಶಿಥಿಲಗೊಂಡು 5 ತಿಂಗಳು ಕಳೆದಿದೆ. ಇದರಿಂದ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪರಿಣಾಮ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ರಾತ್ರಿ ವೇಳೆ ಸೀಮೆಎಣ್ಣೆ ಚಿಮಣಿ ದೀಪದಲ್ಲಿ ಕಾಲ ಕಳೆಯುವಂತಾಗಿದೆ. ಕಾಡು ಪ್ರಾಣಿಗಳ ಕಿರಿಕಿರಿಯನ್ನು ಅನುಭವಿಸಬೇಕಿದೆ. ವಿದ್ಯಾರ್ಥಿಗಳ ಅಭ್ಯಾಸಕ್ಕೂ ತೊಡಕಾಗಿದೆ. ಇತ್ತ ಮೊಬೈಲ್ ಚಾರ್ಜ್ ಮಾಡಿಕೊಳ್ಳಲು ಸಹ ಸಾಧ್ಯವಾಗುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.
ವಿದ್ಯುತ್ ತಂತಿಗಳನ್ನು ಬದಲಾಯಿಸುವಂತೆ ಸೆಸ್ಕ್ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ತುಂಬಾ ತೊಂದರೆಯನ್ನು ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಇತ್ತ ಗಮನಹರಿಸಿ ವಿದ್ಯುತ್ ತಂತಿಗಳನ್ನು ಬದಲಾಯಿಸುವುದರ ಮೂಲಕ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು. ಇಲ್ಲವಾದಲ್ಲಿ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದೇ ವೇಳೆ ರೈತ ರುದ್ರೇಗೌಡ ಮಾತನಾಡಿ, ವಿದ್ಯುತ್ ಇಲ್ಲದ ಪರಿಣಾಮ ಸಮೀಪದ ಅರಣ್ಯ ಪ್ರದೇಶದಿಂದ ಸೋಮವಾರ ರಾತ್ರಿ ಕಾಡಾನೆಗಳ ಹಿಂಡು ಜಮೀನಿಗೆ ಲಗ್ಗೆ ಫಸಲನ್ನು ತುಳಿದು ನಾಶಪಡಿಸಿದೆ. ಅಲ್ಲದೇ ಸೋಲಾರ್ ಬೇಲಿಯನ್ನು ಹಾನಿಗೊಳಿಸಿದೆ. ಇದರಿಂದ ನಷ್ಟ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.