ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಗ್ರಾಪಂ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಡದೆ ನಿರ್ಲಕ್ಷಿೃಸಲಾಗಿದೆ ಎಂದು ಆರೋಪಿಸಿ ಸಾರ್ವಜನಿಕರು ಉಪವಿಭಾಗಧಿಕಾರಿಗಳಿಗೆ ಹಾಗೂ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಿದರು.
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೈರಾಜ್ ಹಾಗೂ, ದರ್ಶನ್ , ಅನೀಶ್, ಸಂಜಯ್ ಇತರರು ಪಟ್ಟಣದ ತಾಲೂಕು ಕಚೇರಿಯಲ್ಲಿರುವ ಉಪವಿಭಾಗಾಧಿಕಾರಿ ಕಚೇರಿ ಹಾಗೂ ತಾಪಂ ಕಚೇರಿಗೆ ತೆರಳಿಗೆ ಇಒಗೆ ಬುಧವಾರ ದೂರು ಸಲ್ಲಿಸಿದರು.
ಮಧುವನಹಳ್ಳಿ ಗ್ರಾಪಂ ಕಚೇರಿಯಲ್ಲಿ ನಡೆದ ಸ್ವಾತಂತ್ರೃ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡದೆ ಸಾಮಾಜಿಕ ನ್ಯಾಯ ಕಡೆಗಣಿಸಲಾಗಿದೆ. ಇದಕ್ಕೆ ಕಾರಣರಾದ ಪಂಚಾಯಿತಿ ಪಿಡಿಒ ಹಾಗೂ ಕಾರ್ಯದರ್ಶಿ ಮೇಲೆ ಕ್ರಮ ವಹಿಸಬೇಕೆಂದು ಎಸಿ ಮಹೇಶ್ ಮತ್ತು ಇಒ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಮಧುವನಹಳ್ಳಿ ಗ್ರಾಪಂ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅಂಬೇಡ್ಕರ್ ಅವರ ಫೋಟೋ ಇಟ್ಟಿಲ್ಲ ಎಂಬ ದೂರು ಸಾರ್ವಜನಿಕರಿಂದ ಬಂದಿದೆ. ಪ್ರಭಾರ ಇಒ ಉಮೇಶ್ ಅವರ ಗಮನಕ್ಕೆ ದೂರಿನ ವಿಚಾರ ತಂದಿದ್ದೇನೆ. ಗ್ರಾಪಂಗೆ ನೋಟೀಸ್ ನೀಡುವುದಾಗಿ ಹೇಳಿದ್ದಾರೆ.
ಗೋಪಾಲಕೃಷ್ಣ, ಸಹಾಯಕ ನಿರ್ದೇಶಕ, ತಾಪಂ ಕಚೇರಿ