ಮೈಸೂರು: ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಗ್ರಾಮದಲ್ಲಿರುವ ಧನುಷ್ಕೋಟಿ ಕಾವೇರಿ ಜಲಪಾತೋತ್ಸವ ಕಾರ್ಯಕ್ರಮವನ್ನು ಡಿ.7 ಹಾಗೂ 8 ರಂದು ಆಯೋಜಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಚುಂಚನಕಟ್ಟೆ ಜಲಪಾತೋತ್ಸವ ಆಚರಣೆ ಸಂಬಂಧ ಪೂರ್ವಭಾವಿ ಸಭೆ ನಡೆಯಿತು.
ಶಾಸಕ ಡಿ.ರವಿಶಂಕರ್ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆ ಆಗಿದ್ದು, ಧನುಷ್ಕೋಟಿ ಕಾವೇರಿ ಜಲಪಾತ ಕಾರ್ಯಕ್ರಮ ಮಾಡಲಾಗುವುದು. ಅರ್ಥಪೂರ್ಣವಾಗಿ ಜಲಪಾತೋತ್ಸವ ಹಮ್ಮಿಕೊಳ್ಳಲಾಗುತ್ತಿದ್ದು, ಕೆ.ಆರ್.ನಗರದಿಂದ ಚುಂಚನಕಟ್ಟೆ ಮಾರ್ಗದಲ್ಲಿ ವಿದ್ಯುತ್ ಅಲಂಕಾರ ಮಾಡಬೇಕು. ಹೆಸರಾಂತ ಕಲಾವಿದರಿಂದ ರಸಸಂಜೆ, ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಆವರಣದಲ್ಲಿ ವಸ್ತು ಪ್ರದರ್ಶನ ಹಾಗೂ ವಿವಿಧ ಮಳಿಗೆ ತೆರೆಯಬೇಕು. ಜಲಪಾತೋತ್ಸವ ಸಂಬಂಧ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು. ಆರೋಗ್ಯ ಶಿಬಿರ ಮಾಡಿ ಬರುವ ಪ್ರವಾಸಿಗರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಬೇಕು ಎಂದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಕಾರ್ಯಕ್ರಮಕ್ಕಾಗಿ ಉತ್ತಮ ವೇದಿಕೆ ವ್ಯವಸ್ಥೆ ಮಾಡಬೇಕು. ರಸ್ತೆ ಗುಂಡಿ ಮುಚ್ಚುವ ವ್ಯವಸ್ಥೆ ಮಾಡಬೇಕು.
ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಬರುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾವಿದರನ್ನು ಗುರುತಿಸಿ ಕರೆಸಲು ಕ್ರಮ ವಹಿಸಲಾಗುವುದು. ಕಾಲೇಜು ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ, ಹುಣಸೂರು ಉಪವಿಭಾಗಾಧಿಕಾರಿ ವಿಜಯ್‌ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಡಿ.ಎಂ.ಸುದರ್ಶನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭುಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.