ವಿಜಯಪುರ: ಮಹಿಳೆಯರ ಆರ್ಥಿಕ ಸಬಲೀಕರಣದ ನಿಟ್ಟಿನಲ್ಲಿ ಇಂದು ಐತಿಹಾಸಿಕ ದಿನವಾಗಿದೆ. ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಮೂಲಕ ದಿಟ್ಟ ಹೆಜ್ಜೆಯನ್ನಿಟ್ಟು ನುಡಿದಂತೆ ನಡೆಯುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.
ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಮನೆ ಯಜಮಾನಿಗೆ ಮಾಸಿಕ 2ಸಾವಿರ ರೂ. ಒದಗಿಸುವ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರವು ನೂರು ದಿನ ಪೂರೈಸುತ್ತಿರುವ ಸಂದರ್ಭದಲ್ಲಿ 4 ಗ್ಯಾರಂಟಿ ಈಡೇರಿಸಿದ್ದೇವೆ. ಯುವನಿಧಿ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಶಕ್ತಿ ಯೋಜನೆಯಡಿ ಇದುವರೆಗೆ 1.17ಕೋಟಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ತಲಾ 5ಕೆಜಿ ಅಕ್ಕಿ ನೀಡಿದ್ದು, ಉಳಿದ 5ಕೆಜಿ ಅಕ್ಕಿಯ ಮೊತ್ತವನ್ನು ಪ್ರತಿ ಸದಸ್ಯರಿಗೆ ಪಾವತಿ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ವರೆಗಿನ ಉಚಿತ ವಿದ್ಯುತ್ ಒದಗಿಸಲಾಗುತ್ತಿದೆ. ಯುವನಿಧಿ ಯೋಜನೆಯು ಡಿಸೆಂಬರ್‌ನಲ್ಲಿ ಚಾಲನೆಗೊಳ್ಳಲಿದೆ ಎಂದರು.
ಜಿಲ್ಲೆಯಲ್ಲಿ ಆಗಸ್ಟ್ 28ರವರೆಗೆ 4,29,783 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಶೇ. 82.51ರಷ್ಟು ಸಾಧನೆಯಾಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳಿಗಾಗಿ ಆಯವ್ಯಯದಲ್ಲಿ ಅನುದಾನ ಘೋಷಿಸಿ ಜಾರಿಗೊಳಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ 211 ಗ್ರಾಪಂ ಹಾಗೂ 15 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 47 ಸ್ಥಳ ಸೇರಿ 258 ಕಡೆ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ರಂಗಮಂದಿರದ ಸುತ್ತ ಹಬ್ಬದ ವಾತಾವರಣ ಮನೆ ಮಾಡಿತ್ತು. ಪ್ರವೇಶ ದ್ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಚಿಹ್ನೆಯ ಸುತ್ತ ನಾನೇ ಯಜಮಾನಿ-ನಾನೇ ನಾಯಕಿ ಎಂಬ ರಂಗೋಲಿ ಗಮನ ಸೆಳೆಯಿತು.
ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಪಂ ಸಿಇಒ ರಾಹುಲ್ ಶಿಂಧೆ, ಎಸ್‌ಪಿ ಎಚ್.ಡಿ. ಆನಂದಕುಮಾರ, ಮಹಾನಗರ ಪಾಲಿಕೆಯ ಆಯುಕ್ತ ಬದ್ರುದ್ದಿನ ಸೌದಾಗರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಕೆ. ಚವ್ಹಾಣ ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳು, ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.