ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಡೆಂಘೆ, ಚಿಕುಂಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸಿಬ್ಬಂದಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕೈಗೊಂಡಿದ್ದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಣ ಕುರಿತ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಗಾಲದ ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ಪತ್ತಿಯಾಗುತ್ತವೆ. ಇವು ಮನುಷ್ಯರನ್ನು ಕಚ್ಚುವುದರಿಂದ ನಾನಾ ರೋಗಗಳು ಬರುತ್ತವೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿ.ಪಂ.ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಕಾಶ್ ಮತ್ತಿತರರು ಇದ್ದರು.
* ಸಿಬ್ಬಂದಿಗೆ ಸಲಹೆ ಸೂಚನೆಗಳು
ಜನ ವಸತಿ ಪ್ರದೇಶದಲ್ಲಿ ತ್ಯಾಜ್ಯ ಮತ್ತು ಮಳೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸುವಿಕೆ, ತಾಲೂಕು ಮಟ್ಟದಲ್ಲಿ ತಾ.ಪಂ.ಇಒ, ಪಿಡಿಒ ಮತ್ತು ಕಾರ್ಯದರ್ಶಿಗಳ ಸಭೆ ಕೈಗೊಂಡು ಮುಂಜಾಗ್ರತಾ ಕ್ರಮಗಳ ಪಾಲನೆ, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರಿಂದ ಲಾರ್ವಾ ಸಮೀಕ್ಷೆ ಕಾರ್ಯ ಸೇರಿದಂತೆ ಪ್ರಮುಖ ಕೆಲಸಗಳ ಬಗ್ಗೆ ಚರ್ಚಿಸಲಾಯಿತು. ಸಿಬ್ಬಂದಿಗೆ ಸಲಹೆ ಸೂಚನೆ ನೀಡಲಾಯಿತು.
* ಹೊಸ ೩೮ ಪ್ರಕರಣಗಳು
ಜಿಲ್ಲೆಯಲ್ಲಿ ಕಳೆದ ವರ್ಷ 290 ಡೆಂಘೆ ಪ್ರಕರಣಗಳು ದೃಢಪಟ್ಟಿದ್ದು ಈ ವರ್ಷದಲ್ಲಿ ಇಲ್ಲಿಯವರೆಗೆ 38 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 18 ಪ್ರಕರಣಗಳು ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಮಾತ್ರ ಪತ್ತೆಯಾಗಿದ್ದು ಉಳಿದಂತೆ ಶಿಡ್ಲಘಟ್ಟ 10 ಪ್ರಕರಣಗಳು, ಚಿಂತಾಮಣಿ, ಬಾಗೇಪಲ್ಲಿ, ಗೌರಿಬಿದನೂರಿನಲ್ಲಿ ತಲಾ 3 ಪ್ರಕರಣಗಳು ಮತ್ತು ಗುಡಿಬಂಡೆಯಲ್ಲಿ 1 ಪ್ರಕರಣ ದೃಢಪಟ್ಟಿದೆ. ಈ ಭಾಗದಲ್ಲಿ ಡೆಂಘೆ ನಿಯಂತ್ರಣಕ್ಕೆ ಹೆಚ್ಚಿನ ನಿಗಾ ವಹಿಸಬೇಕಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.