ಜಿಲ್ಲೆ

ತಂಬಾಕಿನಿಂದ ದೂರವಿದ್ದರೆ ಉತ್ತಮ ಆರೋಗ್ಯ

ಕುಶಾಲನಗರ: ವಿದ್ಯಾರ್ಥಿಗಳು ತಂಬಾಕಿನ ಯಾವುದೇ ಉತ್ಪನ್ನಗಳನ್ನು ಬಳಸದೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಕರೆ ನೀಡಿದರು.


ಜಿಲ್ಲಾಡಳಿತ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೊಡಗು ಜಿಲ್ಲೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ಎನ್.ಎಸ್.ಎಸ್.ಘಟಕ ವತಿಯಿಂದ ಕುಶಾಲನಗರ ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ನಮಗೆ ಆಹಾರ ಬೇಕು, ತಂಬಾಕು ಅಲ್ಲ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ಜನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಎಂದರು.


ತಂಬಾಕು ರಹಿತ ದಿನದ ಮಹತ್ವ ಕುರಿತು ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದ ಶಾಲಾ ಮುಖ್ಯಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಪ್ರತಿ ವರ್ಷ ಮೇ 31 ಅನ್ನು ವಿಶ್ವ ತಂಬಾಕು ರಹಿತ ದಿನಾಚರಣೆ ಸಂದರ್ಭದಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ತಂಬಾಕು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ, ಪರಿಸರದ ಮೇಲೂ ಅನೇಕ ರೀತಿಯಲ್ಲಿ ದುಷ್ಪರಿಣಾಮ ಬೀರುತ್ತದೆ ಎಂದರು.

ಡಿಡಿಪಿಐ ಸಿ.ರಂಗಧಾಮಯ್ಯ ಮಾತನಾಡಿದರು. ಇದೇ ವೇಳೆ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತ ಭಿತ್ತಿಫಲಕಗಳನ್ನು ಬಿಡುಗಡೆಗೊಳಿಸಲಾಯಿತು. ತಹಸೀಲ್ದಾರ್ ಟಿ.ಎಂ.ಪ್ರಕಾಶ್, ಬಿಇಓ ಕೆ.ವಿ.ಸುರೇಶ್, ಗ್ರಾ.ಪಂ. ಅಧ್ಯಕ್ಷೆ ಇಂದಿರಾ ರಮೇಶ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ, ಆರ್.ಎಂ.ಎಸ್.ಎ. ಡಿವೈಪಿಸಿ ಸೌಮ್ಯಾ, ವಿಷಯ ಪರಿವೀಕ್ಷಕಿ ಕೆ.ಆರ್.ಬಿಂದು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಪಲ್ಯದ್, ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಪಿ.ರೇವಣ್ಣ, ಸಮಿತಿ ಸದಸ್ಯರು ಇದ್ದರು.