ಚಾಮರಾಜನಗರ: ತಂಬಾಕು ದುಷ್ಪರಿಣಾಮಗಳ ಕುರಿತು ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದರ ತೆಗೆ ಕಾನೂನು ಅನುಷ್ಠಾನವು ಅವಶ್ಯಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಶುಕ್ರವಾರ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳು ಮತ್ತು ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಟಾ-2003ರ ಕಾನೂನು ಕುರಿತು ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕಾನೂನು ಜಾರಿಗೊಂಡು 20 ವರ್ಷಗಳನ್ನು ದಾಟಿದರೂ ಸಹ ಇನ್ನೂ ಕಾಯ್ದೆಯ ಆಳ ಮತ್ತು ಅಗಲವನ್ನು ತಿಳಿಯುವ ಮತ್ತು ತಿಳಿಯಬಯಸುವ ಹಂತದಲ್ಲಿಯೇ ಇದ್ದೇವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರುವ ಕಾಯ್ದೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ. ಕೋಟ್ಪಾ ಕಾನೂನು ಅನುಷ್ಠಾನಗೊಳಿಸುವಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿ ಹೆಚ್ಚಿದ್ದು, ತರಬೇತಿಯ ಸದ್ಬಳಕೆ ಮಾಡಿಕೊಂಡು ಕಾಯ್ದೆಯನ್ನು ತಾಲೂಕು ಹಂತದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಾರ್ಯೋನ್ಮುಖರಾಗಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಬೋಧನಾ ಸಂಸ್ಥೆ ಸಮುದಾಯ ಆರೋಗ್ಯ ವಿಭಾಗದ ಡಾ.ವಾಸಿಂ ಹಾಗೂ ಡಾ.ದರ್ಶನ್ ತರಬೇತಿ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸುಂದರೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಪ್ರಶಾಂತ್ ಹಾಜರಿದ್ದರು.