ಜಿಲ್ಲೆ

ತಂಬಾಕು ನಿಯಂತ್ರಣಕ್ಕೆ ಸೂಚನೆ

ಬೀದರ್: ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಜಿಲ್ಲಾದ್ಯಂತ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಪ್ರತಿ ತಾಲೂಕಿನಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ತಂಬಾಕು ದಾಳಿ ಬಗ್ಗೆ ಸಮನ್ವಯ ಸಮತಿ ಸಭೆ ನಡೆಸಿ ವಾರಕ್ಕೊಮ್ಮೆ ಒಂದು ದಾಳಿ ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಡಿಎಚ್ಒ ಡಾ.ವಿ.ಜಿ.ರೆಡ್ಡಿ ಮಾತನಾಡಿ, ಕೋಟ್ಪಾ ಕಾಯ್ದೆ 2003ರ ನಿಯಮ ಪಾಲಿಸದ ಮತ್ತು ಉಲ್ಲಂಘನೆ ಮಾಡಿದ ಅಂಗಡಿ ಮುಂಗಟ್ಟುಗಳ ಮೇಲೆ ಜಿಲ್ಲಾದ್ಯಂತ ಒಟ್ಟು 198 ದಾಳಿ ನಡೆಸಿ ಈವರೆಗೆ 21,650 ರೂ. ದಂಡ ಸಂಗ್ರಹಿಸಲಾಗಿದೆ ಎಂದರು.

ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ತಂಬಾಕು ನಿಯಂತ್ರಣ ಕೋಶ ಅಧಿಕಾರಿ ಡಾ.ಕೃಷ್ಣಾ ರೆಡ್ಡಿ, ಡಿವೈಎಸ್ಪಿ ಬಸವೇಶ್ವರ ಹೀರಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಶಂಕರ ಇತರರಿದ್ದರು.