ತನಿಖಾ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ವಿಚಾರಣೆ ಹೆಸರಿನಲ್ಲಿ ಮೂಲಕ ಕೇಂದ್ರ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಶುಕ್ರವಾರ ಪ್ರತಿಭಟನೆ ನಡೆಸಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಜಿ.ಎಸ್. ಪಾಟೀಲ, ಮಾಜಿ ಸಚಿವ ಬಿ.ಆರ್. ಯಾವಗಲ್, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಶ್ರೀಶೈಲಪ್ಪ ಬಿದರೂರ, ನಗರಸಭೆ ಸದಸ್ಯ ಸುರೇಶ ಕಟ್ಟಿಮನಿ, ಕೃಷ್ಣಗೌಡ ಪಾಟೀಲ, ಮಿಥುನ್ ಪಾಟೀಲ, ಉಮರ್ ಫಾರೂಕ್ ಹುಬ್ಬಳ್ಳಿ ಮತ್ತಿತರರು ಇದ್ದರು. 
ಜಿಲ್ಲೆ

ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ

ಗದಗ: ತನಿಖಾ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ವಿಚಾರಣೆ ಮೂಲಕ ಕೇಂದ್ರ ಸರ್ಕಾರ ಕಿರುಕುಳ ನೀಡುತ್ತದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಶುಕ್ರವಾರ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ರ್ಯಾಲಿಯುದ್ದಕ್ಕೂ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಉಪವಿಭಾಗಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಮಾತನಾಡಿ, ಇಡಿ, ಐಟಿ, ಸಿಬಿಐ ದಂಡೇ ಬರಲಿ, ಕಾಂಗ್ರೆಸ್ ನಿರ್ಧಾರ ಅಚಲ. ಪಕ್ಷದ ಕಾರ್ಯಕರ್ತರೆಲ್ಲರೂ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಬೆನ್ನಿಗೆ ಇರುತ್ತಾರೆ. 8 ವರ್ಷ ಕಾಲ ಸುಳ್ಳು ಹೇಳಿ ಅಧಿಕಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಮರಾಜ್ಯವನ್ನು ರಾವಣ ರಾಜ್ಯವನ್ನಾಗಿ ಮಾಡಿದ್ದಾರೆ. ಉದ್ಯೋಗ ಸೃಷ್ಟಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹರಿಹಾಯ್ದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್. ಪಾಟೀಲ ಮಾತನಾಡಿ, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಸುಳ್ಳು ಆಪಾದನೆ ಹೊರಿಸಿ ಇಡಿ ತನಿಖೆ ಆರಂಭಿಸಿರುವುದು ಖಂಡನೀಯ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇವತ್ತು, ಮೊನ್ನೆ ಹುಟ್ಟಿದ್ದಲ್ಲ. ಸ್ವಾತಂತ್ರ್ಯ ಪೂರ್ವದಿಂದಲೇ ಇತ್ತು. ಬ್ರಿಟಿಷ್ ಆಳ್ವಿಕೆಯ ವಿರುದ್ಧ ಧ್ವನಿಯಾಗಿತ್ತು. ಇಲ್ಲಸಲ್ಲದ ಅರೋಪಗಳಿಂದ ಕಾಂಗ್ರೆಸ್ ಬಲವನ್ನು ಕುಂದಿಸಲು ಬಿಜೆಪಿ ಸರ್ಕಾರ ಶತಪ್ರಯತ್ನ ಮಾಡುತ್ತಿದೆ. ಆದರೆ, ಅದು ಎಂದಿಗೂ ಕೈಗೂಡುವುದಿಲ್ಲ ಎಂದು ಕುಟುಕಿದರು.
ಮಾಜಿ ಸಚಿವ ಬಿ.ಆರ್.ಯಾವಗಲ್, ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿ, ಕಳೆದ ಎಂಟು ವರ್ಷಗಳಿಂದ ಕೇಂದ್ರ ಸರ್ಕಾರ ಅತ್ಯಂತ ಕೆಟ್ಟ ಆಡಳಿತ ನೀಡಿದೆ. ದೇಶದಲ್ಲಿ ಆತಂಕಕಾರಿ ಪರಿಸ್ಥಿತಿ ಎದುರಾಗಿದೆ. ಮೋದಿ ಸರ್ಕಾರದ ವಿರುದ್ಧ ಮಾತನಾಡಿದರೆ, ಲೋಪಗಳನ್ನು ಎತ್ತಿಹಿಡಿದರೆ ತನಿಖಾ ಸಂಸ್ಥೆಗಳ ಮೂಲಕ ತನಿಖೆ ಆರಂಭಿಸಿ ಅವರನ್ನು ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.