ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:
ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೂರೈಸಲಾಗುವ ಆಹಾರವನ್ನು ಅಕ್ರಮವಾಗಿ ಮಾರಾಟ ಮಾಡುವ ನೀಚ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಗಬ್ಬೂರ ಬಳಿ ಗೋದಾಮಿನಲ್ಲಿ ಅಕ್ರಮವಾಗಿ ಆಹಾರ ಕಿಟ್ ದಾಸ್ತಾನು ಮಾಡಿದ ಪ್ರಕರಣದಲ್ಲಿ ಯಾರೇ ಶಾಮೀಲಾಗಿದ್ದರೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಎಚ್ಚರಿಕೆ ನೀಡಿದರು.
ಇಲ್ಲಿಯ ಪಾಲಿಕೆ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರೊಂದಿಗೆ ಅವರು ಮಂಗಳವಾರ ಸಭೆ ನಡೆಸಿದರು.
ಕ್ಷಮೆಗೆ ಅರ್ಹವಲ್ಲದ ತಪ್ಪುಗಳನ್ನು ಯಾರು ಮಾಡಬಾರದು. ಒಂದು ಹೆಣ್ಣಾಗಿ ಮಕ್ಕಳಿಗೆ, ಗರ್ಭಿಣಿಯರಿಗೆ ಸೇರಬೇಕಿದ್ದ ಪೌಷ್ಟಿಕ ಆಹಾರ ಕದಿಯುವುದು ಅಮಾನವೀಯ. ಅಪೌಷ್ಟಿಕತೆ ನಿವಾರಣೆಗೆ ದಶಕಗಳಿಂದಲೂ ಹೋರಾಟ ನಡೆದಿದೆ. ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇಂಥ ನೀಚ ಕೃತ್ಯದಿಂದ ಎಷ್ಟೇ ಪೌಷ್ಟಿಕ ಆಹಾರ ನೀಡಿದರೂ ಅದು ಫಲಾನುಭವಿಗಳಿಗೆ ತಲುಪಲು ಸಾಧ್ಯವೇ ಇಲ್ಲ ಎಂದರು.
ಅನೇಕ ಅಂಗನವಾಡಿಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಅಧಿಕಾರಿಗಳು ಸೇರಿದಂತೆ ಮೇಲ್ವಿಚಾರಕರು, ಕಾರ್ಯಕರ್ತರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಇಂಥ ಪ್ರಕರಣಗಳು ಮರುಕಳಿಸದಂತೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕೆಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಚ್.ಎಚ್.ಕುಕನೂರ, ಜಿಲ್ಲಾ ನಿರೂಪಣಾಧಿಕಾರಿ ಕಮಲಾ ಬೈಲೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುತ್ತಣ್ಣ, ಇತರರು ಇದ್ದರು.