ಪಾಂಡವಪುರ: ರೈತ ಸಂಘ ಬಹಳ ಹಿಂದಿನಿಂದಲೂ ಚಳವಳಿ ಮತ್ತು ಹೋರಾಟಗಳ ಮೂಲಕ ಬೆಳೆದು ಬಂದಿದೆ. ನಾನು ಕೂಡ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಸಂಘಟನೆ ಕಟ್ಟುತ್ತಿಲ್ಲ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ರೈತಸಂಘ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ರೈತ ಸಂಘಟನೆಯನ್ನು ತಳಮಟ್ಟದಿಂದ ಕಟ್ಟಬೇಕಾದ ಅನಿವಾರ್ಯತೆ ಇದೆ. ಕ್ಷೇತ್ರದ ಜನರ ಮನಸ್ಸಿನಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಗೆಲ್ಲಿಸಿದ್ದೇವೆ, ಏನು ಮಾಡುತ್ತಾರೋ ಎಂಬ ಪ್ರಶ್ನೆ ಇದೆ. ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರ ಅನುದಾನ ಕೊಡುತ್ತದೆ. ಆ ಅನುದಾನ ಬಳಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಸಾಮಾನ್ಯವಾಗಿರುತ್ತದೆ. ಯಾರೇ ಶಾಸಕರಾದರೂ ಆ ಕೆಲಸ ಮಾಡುತ್ತಾರೆ. ಆದರೆ ರೈತರ ಜೀವನ ಮತ್ತು ಆರ್ಥಿಕ ಮಟ್ಟವನ್ನು ಸುಧಾರಣೆ ಮಾಡಬೇಕು, ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂಬುದು ನನ್ನ ಉದ್ದೇಶವಾಗಿದೆ ಎಂದು ತಿಳಿಸಿದರು.
350 ಕೋಟಿ ರೂ.ಅನುದಾನ: ಮೇಲುಕೋಟೆ ಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ ಸರ್ಕಾರದಿಂದ 350 ಕೋಟಿ ರೂ.ಗೂ ಅಧಿಕ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನೀರಾವರಿ ಇಲಾಖೆಯ 55 ಕೋಟಿ ರೂ.ಅನುದಾನದಲ್ಲಿ ಏತ ನೀರಾವರಿ ಮತ್ತು ವಿಶ್ವೇಶ್ವರಯ್ಯ ನಾಲೆ ಮತ್ತು ಉಪ ನಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸಣ್ಣ ನೀರಾವರಿ ಇಲಾಖೆಯಿಂದ 33 ಕೋಟಿ ರೂ. ಲೋಕೋಪಯೋಗಿ ಇಲಾಖೆಯಿಂದ 65 ಕೋಟಿ ಆರ್‌ಡಿಪಿಆರ್‌ನಿಂದ 60 ಕೋಟಿ ರೂ.ಅನುದಾನವನ್ನು ಸರ್ಕಾರದಿಂದ ತರಲಾಗಿದೆ.
ಇದರಲ್ಲಿ ಹಲವಾರು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿದು ಕೆಲಸ ಪ್ರಗತಿಯಲ್ಲಿದೆ. ಇನ್ನೂ ಮೇಲುಕೋಟೆ, ಮಂಡ್ಯ ರಸ್ತೆ ಅಭಿವೃದ್ಧಿಗೆ 12 ಕೋಟಿ ರೂ., ಲಕ್ಷ್ಮೀಸಾಗರ ಪಂಚಾಯಿತಿಗೆ 4.5 ಕೋಟಿ ರೂ., ಕ್ಯಾತನಹಳ್ಳಿ ಗ್ರಾಪಂಗೆ 4 ಕೋಟಿ ರೂ.ಅನುದಾನ ನೀಡಲಾಗಿದೆ ಎಂದರು.
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗೆ ಸೆಡ್ಡು ಹೊಡೆಯಬೇಕು: ಸರ್ಕಾರಿ ಶಾಲೆಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಯಾವುದರಲ್ಲೂ ಕಡಿಮೆ ಇರಬಾರದು ಎಂಬ ಧ್ಯೇಯದೊಂದಿಗೆ ಖಾಸಗಿ ಸಂಸ್ಥೆಗಳ ಸಹಕಾರದಲ್ಲಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ ಕ್ಯಾತನಹಳ್ಳಿಯಲ್ಲಿ 10 ಕೋಟಿ ರೂ.ವೆಚ್ಚದಲ್ಲಿ ಸರ್ಕಾರಿ ಶಾಲೆ ನಿರ್ಮಿಸಲಾಗುತ್ತಿದೆ. ಕೆಲವರು ಶಾಲೆಗಳ ಅಭಿವೃದ್ಧಿಗೆ ಎಲ್ಲಿಂದ ಹಣ ತರುತ್ತೀರಾ ಎಂದು ಕೇಳುತ್ತಿದ್ದಾರೆ. ಅದಕ್ಕೆ ನಾನು ಯಾರ ಕಾಲನ್ನು ಹಿಡಿದಾದರೂ ಸರಿ, ಇಲ್ಲವೇ ಮನೆ, ಮಠ ಮಾರಿಯಾದರೂ ಹಣ ತಂದು ಸರ್ಕಾರಿ ಶಾಲೆ ಅಭಿವೃದ್ಧಿ ಪಡಿಸುತ್ತೇನೆ ಎಂದಿದ್ದೇನೆ ಎಂದರು.
ಪಟ್ಟಣದ ಅಭಿವೃದ್ಧಿಗೆ ಕ್ರಮ: ಪೂರ್ಣಗೊಳ್ಳದ ಯುಜಿಡಿ ಕಾಮಗಾರಿಯಿಂದ ಪಟ್ಟಣ ನಿವಾಸಿಗಳಿಗೆ ತೊಂದರೆಯಾಗಿದೆ. ಕಾಮಗಾರಿಗೆ ಅಡ್ಡವಾಗಿದ್ದ ಜಮೀನು ಸಮಸ್ಯೆ, ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಅಗತ್ಯವಿದ್ದ ಅನುದಾನ ಬಿಡುಗಡೆಯಾಗಿದೆ. ಹೀಗಾಗಿ ಶೀಘ್ರದಲ್ಲೇ ಯುಜಿಡಿ ಕಾಮಗಾರಿ ಪೂರ್ಣಗೊಳ್ಳಲಿದೆ. ಜತೆಗೆ ಪಟ್ಟಣದಲ್ಲಿ ಕಲಾಮಂದಿರ ನಿರ್ಮಾಣ ಮಾಡಲಾಗುವುದು. ಹೊಸ ಆಸ್ಪತ್ರೆಗೆ ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿದ್ದು ಜಾಗದ ಸಮಸ್ಯೆ ಎದುರಾಗಿದೆ. ಸಂತೆ ಮೈದಾನ ಅಭಿವೃದ್ಧಿ, ಹಳೇ ಬಸ್ ನಿಲ್ದಾಣದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣ ಇನ್ನಿತರ ಕಾಮಗಾರಿಗಳಿಗೆ ಸರ್ಕಾರ 30 ಕೋಟಿ ರೂ.ಅನುದಾನ ನೀಡಿದೆ ಎಂದರಲ್ಲದೆ, ಜನರ ಜೀವನ ಮಟ್ಟ ಸುಧಾರಣೆಗಾಗಿ ಸರ್ಕಾರ ಅನುದಾನ ನೀಡಲ್ಲ. ಅದಕ್ಕಾಗಿ ಪುಟ್ಟಣ್ಣಯ್ಯ ಫೌಂಡೇಷನ್ ಹೆಸರಿನಲ್ಲಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು.
ಸಭೆಯಲ್ಲಿ ರೈತನಾಯಕಿ ಸುನೀತಾ ಪುಟ್ಟಣ್ಣಯ್ಯ, ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ಕೆನ್ನಾಳು ವಿಜಯಕುಮಾರ್, ಕಾರ್ಯದರ್ಶಿ ವೈ.ಪಿ.ಮಂಜುನಾಥ್, ಮುಖಂಡರಾದ ಕೆ.ಟಿ.ಗೋವಿಂದೇಗೌಡ, ಎಸ್.ದಯಾನಂದ್, ಎಚ್.ಎಲ್.ಮುರಳೀಧರ್ ಇತರರು ಇದ್ದರು.