ಜಿಲ್ಲೆ

ತವರಿನ ಪ್ರಗತಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ, ಇಡೀ ದಿನ ಅಧಿಕಾರಿಗಳೊಂದಿಗೆ ನಿರಂತರ ಸಭೆ

ಮೈಸೂರು: ಇಲಾಖೆಗಳ ನಡುವೆ ಹೊಂದಾಣಿಕೆ ಇರಬೇಕು. ಬಹಳಷ್ಟು ಇಲಾಖೆಗಳ ನಡುವೆ ಅಂತರ ಸಂಬಂಧ ಇರುತ್ತದೆ. ಹೀಗಾಗಿ ಪರಸ್ಪರ ಹೊಂದಾಣಿಕೆಯಿಂದ ಸಮಸ್ಯೆಗಳನ್ನು ಗುರುತಿಸಿ, ಪರಿಹಾರ ಕಂಡುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಕೆಡಿಪಿ ಸಭೆ ಕರೆದಾಗ ರಾಜ್ಯ ಮಟ್ಟದ ಅಧಿಕಾರಿಗಳೂ ಸಭೆಗೆ ಬರಬೇಕು. ಸಭೆಗೆ ಆಹ್ವಾನ ಹೋದರೂ ಬರದಿದ್ದರೆ ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಚುನಾಯಿತ ಪ್ರತಿನಿಧಿಗಳು ಯಾವುದೇ ಪಕ್ಷದವರಾಗಿದ್ದರೂ ಸರ್ಕಾರದ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಅಧಿಕಾರಿಗಳು ಶಿಷ್ಟಾಚಾರ ಪಾಲಿಸಬೇಕು. ಅಧಿಕಾರಿಗಳೇ ರಾಜಕೀಯ ಮಾಡಬಾರದು ಎಂದು ಎಚ್ಚರಿಸಿದರು.
ರೈತರಿಗೆ ಒಮ್ಮೆ ಬಿತ್ತನೆ ಬೀಜಗಳನ್ನು ಒದಗಿಸಿಬಿಟ್ಟರೆ ತಮ್ಮ ಜವಾಬ್ದಾರಿ ಮುಗಿಯಿತೆಂದು ಕೃಷಿ ಅಧಿಕಾರಿಗಳು ಕೈಕಟ್ಟಿ ಕುಳಿತುಕೊಳ್ಳಬಾರದು. ಬೆಳೆ ನಷ್ಟವಾದರೆ ಮತ್ತೊಂದು ಸುತ್ತು ಬೀಜ ವಿತರಣೆ ಮಾಡಬೇಕು. ಇಡೀ ಜಿಲ್ಲೆಯಲ್ಲಿ ಎಲ್ಲೇ ಬೀಜ-ಗೊಬ್ಬರದ ಕೊರತೆ ಬಗ್ಗೆ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಉದಾರವಾಗಿ ವರ್ತಿಸಿ, ಸರ್ಕಾರ ನೀಡುವ ಪರಿಹಾರ ಅವರ ಕುಟುಂಬದವರಿಗೆ ತಲುಪಬೇಕು. ಬೆಲೆ ನಷ್ಟ ಮತ್ತು ರೈತರ ಆತ್ಮಹತ್ಯೆ ಕುರಿತಾಗಿ ವಾಸ್ತವ ಸಂಗತಿಗಳು ಮತ್ತು ಕಾರಣಗಳನ್ನು ಪತ್ತೆ ಹಚ್ಚಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಆತ್ಮಹತ್ಯೆಗಳಾಗಿದ್ದರೆ ಅದನ್ನೂ ನಮೂದಿಸಬೇಕು. ಆತ್ಮಹತ್ಯೆ ಹಿಂದಿನ ನೈಜ ಸಂಗತಿಯನ್ನು ಸ್ಪಷ್ಟವಾಗಿ ಗುರುತಿಸಿ, ದಾಖಲಿಸಬೇಕು ಎಂದು ಸೂಚನೆ ನೀಡಿದರು.
ರಾಜ್ಯದ ರೈತರ ಹಿತ ಕಾಯಬೇಕು:
ರಾಜ್ಯದ ರೈತರಿಗೆ ಅನ್ಯಾಯ ಮಾಡಿ ಕಾವೇರಿ ನೀರನ್ನು ತಮಿಳುನಾಡಿಗೆ ಕೊಡಬೇಕು ಎನ್ನುವ ಸೂಚನೆ ಯಾವ ಆದೇಶದಲ್ಲೂ ಇಲ್ಲ. ನಮ್ಮ ಬೆಳೆ ಮತ್ತು ಕುಡಿಯುವ ನೀರಿನ ರಕ್ಷಣೆ ಮಾಡಿಕೊಳ್ಳಬೇಕು. ಸಂಕಷ್ಟ ಪರಿಹಾರ ಸೂತ್ರ ಇನ್ನೂ ಸಿದ್ಧಗೊಳ್ಳಬೇಕಿದೆ. ನಮ್ಮ ರೈತರ ಹಿತ ಕಾಪಾಡುವುದೇ ಮೊದಲ ಆದ್ಯತೆ ಎಂದು ಹೇಳಿದರು.
ಹಣ ಪಶುಪಾಲಕರಿಗೆ ತಲುಪಿಸಿ:
ಪಶುಪಾಲಕರಿಗೆ ಅನುಕೂಲವಾಗಲಿ ಎನ್ನುವ ಕಾರಣದಿಂದ ಹಾಲು ಮಾರಾಟ ದರವನ್ನು 3 ರೂ. ಹೆಚ್ಚಿಸಲಾಗಿದೆ. ಆ ಹಣವನ್ನು ನೇರ ರೈತರಿಗೆ ತಲುಪಿಸಲು ಹಾಲು ಉತ್ಪಾದಕ ಸಹಕಾರ ಸಂಘಗಳು ಕ್ರಮ ಕೈಗೊಳ್ಳಬೇಕು. ಹಾಲು ಒಕ್ಕೂಟಗಳಿಗೆ ಮನಸೋ ಇಚ್ಛೆ ನೇಮಕ ಮಾಡಿಕೊಳ್ಳಬಾರದು. ಹೊರ ಗುತ್ತಿಗೆ ಎನ್ನುವುದನ್ನು ದಂಧೆ ಮಾಡಿಕೊಳ್ಳಬಾರದು. ಮೀಸಲಾತಿ ಮಾನದಂಡದಲ್ಲಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಸಂಬಳ ನಿಲ್ಲಿಸಿದರೆ ಹೇಗಿರುತ್ತೆ?:
ಆದಿವಾಸಿಗಳಿಗೆ 4 ತಿಂಗಳಿಂದ ಆಹಾರ ಪದಾರ್ಥ ನೀಡುತ್ತಿಲ್ಲ ಎಂಬ ವರದಿಗೆ ಸಂಬಂಧಪಟ್ಟಂತೆ ಗರಂ ಆದ ಮುಖ್ಯಮಂತ್ರಿ, ನಿಮಗೆ ಆರು ತಿಂಗಳು ಸಂಬಳ ನಿಲ್ಲಿಸಿದರೆ ಏನಾಗುತ್ತದೆ ಎಂದು ಸಂಬಂಧಪಟ್ಟ ಅಧಿಕಾರ ವಿರುದ್ಧ ಸಿಟ್ಟಾದರು. ಸರ್ಕಾರ ನೀಡುವ ಸೌಲಭ್ಯವನ್ನು ಸರಿಯಾಗಿ ಜನರಿಗೆ ತಲುಪಿಸಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲ. ತಕ್ಷಣವೇ ಆಹಾರ ಪದಾರ್ಥ ನೀಡಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.
ಅವಧಿಯೊಳಗೆ ಟಿಸಿ ಬದಲಿಸಿ:
ಹಾಳಾದ ಟ್ರಾನ್ಸ್‌ಫಾರ್ಮರ್‌ಗಳನ್ನು ನಿಗದಿತ ಅವಧಿಯಲ್ಲಿ ಬದಲಾಯಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದರೆ ಕ್ರಮ ಜರುಗಿಸಲಾಗುವುದು ಎಂದು ಸೆಸ್ಕ್ ಅಧಿಕಾರಿಗಳನ್ನು ಎಚ್ಚರಿಸಿದರು. ಕುಡಿಯುವ ನೀರಿಗೆ ಕೊರತೆ ಆಗದಂತೆ ಕ್ರಮ ಕೈಗೊಳ್ಳಬೇಕು. ಎಷ್ಟೇ ಹಣ ಖರ್ಚಾದರೂ ಕೊಡಲು ನಾವು ಸಿದ್ಧರಿದ್ದೇವೆ ಎಂದರು.
ಕರೊನಾ ಅವಧಿಯಲ್ಲಿ ಬಂದ್ ಆಗಿರುವ ಬಸ್ ಮಾರ್ಗಗಳಿಗೆ ಮರು ಚಾಲನೆ ನೀಡಬೇಕು. ಶಾಸಕರ ಸಭೆ ಕರೆದು ಹೊಸ ಬಸ್ ಮಾರ್ಗಗಳ ಅಗತ್ಯ ಎಲ್ಲೆಲ್ಲಿ ಇವೆ ಎನ್ನುವುದರ ಬಗ್ಗೆ ಸಮಗ್ರವಾಗಿ ಮಾಹಿತಿ ಸಂಗ್ರಹಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗೆ ಸೂಚಿಸಿದರು.