ಹಾಸನ: ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವುದರ ಜತೆಗೆ ತಾಯಿ ಮತ್ತು ಶಿಶು ಮರಣ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಅಭಿಯಾನ ಸಭೆ ನಡೆಸಿ ಮಾತನಾಡಿದ ಅವರು, ಗರ್ಭಿಣಿಯರ ಆರೋಗ್ಯದ ಬಗ್ಗೆ ಉದಾಸೀನ ಮಾಡದೆ ನಿಗಧಿತ ಸಮಯದಲ್ಲಿ ಮತ್ತು ಗುಣಮಟ್ಟದ ಚಿಕಿತ್ಸೆ ನೀಡುವುದರ ಮೂಲಕ ಮುತುವರ್ಜಿ ವಹಿಸುವಂತೆ ತಿಳಿಸಿದರು.
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಯಾವುದೇ ಮಗುವಿಗೆ ಲಸಿಕೆ ತಪ್ಪದಂತೆ ಲಸಿಕೆ ಹಾಕಿಸಲು ಕ್ರಮವಹಿಸಿ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸವಲತ್ತುಗಳು ದೊರೆಯುವಂತೆ ನೋಡಿಕೊಳ್ಳಬೇಕು ಎಂದರು. ಎಲ್ಲೆಲ್ಲಿ ತಪ್ಪುಗಳಾಗುತ್ತೀವೆ ಅವುಗಳನ್ನು ಸರಿಪಡಿಸಿ ಸುಧಾರಣೆಗೆ ನಿಗಾವಹಿಸಲು ನಿರ್ದೇಶನ ನೀಡಿದರಲ್ಲದೆ , ತಾಯಿ ಮತ್ತು ಶಿಶು ಮರಣ ತಡೆಯಲು ಅಗತ್ಯ ಕ್ರಮವಹಿಸಲು ಸೂಚಿಸಿದರು.
ಹಿಮ್ಸ್‌ನಲ್ಲಿ ವೈದ್ಯರು ಬೆಳಗ್ಗೆ ಬಂದು ಹಾಜರಾತಿ ಹಾಕಿ ಹೊರಗೆ ಹೋದರೆ ಮಧ್ಯಾಹ್ನ ಬರುವುದು ಕಂಡು ಬಂದಿದೆ. ಈ ಬಗ್ಗೆ ನಿರ್ದೇಶಕರೊಂದಿಗೆ ಒಂದು ಸಭೆ ನಡೆಸಿ ಕ್ರಮ ವಹಿಸುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು. ಸಾರ್ವಜನಿಕರಿಗೆ ವೈದ್ಯರು ಸಿಗುವಂತಾಗಬೇಕು ಎಂದರಲ್ಲದೆ, ಪ್ರಾಮಾಣಿಕವಾಗಿ ಆತ್ಮ ಸಾಕ್ಷಿಯಿಂದ ಕೆಲಸ ಮಾಡುವಂತೆ ಸೂಚಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್ಲ ರೀತಿಯ ಔಷಧ ದಾಸ್ತಾನು ಇರುವಂತೆ ನೋಡಿಕೊಳ್ಳಿ. ನೀರಿನಿಂದ ಉಂಟಾಗುವ ರೋಗ ರುಜಿನಗಳನ್ನು ತಡೆಯಲು ಮುನ್ನೆಚ್ಚರಿಕೆ ವಹಿಸಿ, ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಸ್ವಾಮಿ, ಆರ್‌ಸಿಎಚ್ ಅಧಿಕಾರಿ ಡಾ.ಶಿವಶಂಕರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಾಗಪ್ಪ, ಹಿಮ್ಸ್ ಪ್ರಸೂತಿ ವಿಭಾಗದ ತಜ್ಞರಾದ ಡಾ.ಮಂಜುನಾಥ್, ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ದೀಪ್ತಿ, ಜಿಲ್ಲಾ ಪ್ರಸೂತಿ ತಜ್ಞರ ಸಂಘದ ಅಧ್ಯಕ್ಷೆ ಡಾ.ಗಿರಿಜಾ ಮತ್ತಿತರರು ಉಪಸ್ಥಿತರಿದ್ದರು.