ಕೆ.ಆರ್.ಪೇಟೆ: ಅಧಿಕಾರವನ್ನು ಬಳಸಿಕೊಂಡು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಶಾಸಕ ಎಚ್.ಟಿ.ಮಂಜು ಹೇಳಿದರು.
ತಾಲೂಕಿನ ಊಗಿನಹಳ್ಳಿ, ಗೋಂದಿಹಳ್ಳಿ, ಮಾದಾಪುರ ಗ್ರಾಮಗಳಲ್ಲಿ 3 ಕೋಟಿ ರೂ. ಅಂದಾಜು ವೆಚ್ಚದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿ, ಸ್ಥಳೀಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದು ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಶಾಸಕನಾಗಲು ಅವಕಾಶ ಮಾಡಿಕೊಟ್ಟ ಜನತೆ ಋಣ ತೀರಿಸಲು ಕ್ಷೇತ್ರದ ಅಭಿವೃದ್ಧಿಗೆ ಪಕ್ಷ ಭೇದ ಮರೆತು ಶ್ರಮಿಸುತ್ತೇನೆ. ಗ್ರಾಮೀಣ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವುದು, ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಗ್ರಾಪಂ ಸಿಬ್ಬಂದಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಪಂ ಸದಸ್ಯರು ಕೈ ಜೋಡಿಸಬೇಕು. ಆಗ ಮಾತ್ರ ಹಳ್ಳಿಗಳು ಅಭಿವೃದ್ಧಿಯಾಗಲು ಸಾಧ್ಯ ಎಂದು ಹೇಳಿದರು.
ಜೆಡಿಎಸ್ ಶಾಸಕನಾಗಿರುವುದರಿಂದ ಸರ್ಕಾರ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಆದರೂ ಶಕ್ತಿ ಮೀರಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಗುತ್ತಿಗೆದಾರರು, ಅಧಿಕಾರಿಗಳು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು ಎಂದರು.
ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿರ್ದೇಶಕ ಸಿ.ಎನ್.ಪುಟ್ಟಸ್ವಾಮಿಗೌಡ, ಜೆಡಿಎಸ್ ಮುಖಂಡ ಬಿ.ಎಂ.ಕಿರಣ್, ಕಿಕ್ಕೇರಿ ಹೋಬಳಿ ಘಟಕದ ಅಧ್ಯಕ್ಷ ಕಾಯಿ ಮಂಜೇಗೌಡ, ಶಾಸಕರ ಆಪ್ತ ಸಹಾಯಕ ಪ್ರತಾಪ್ ಇದ್ದರು.