ಹಾಸನ: ಅರಕಲಗೂಡು ತಾಲೂಕು ಕೊಣನೂರಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕೊಣನೂರು-ಕಟ್ಟೆಪುರ ಸಂಪರ್ಕ ತೂಗು ಸೇತುವೆ ಶಿಥಿಲಗೊಂಡಿರುವುದರಿಂದ ಈ ತೂಗು ಸೇತುವೆಯಲ್ಲಿ ಸಾರ್ವಜನಿಕ ಸಂಚಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಆದೇಶ ಹೊರಡಿಸಿದ್ದಾರೆ.
ಬುಧವಾರ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ ಅವರು ತೂಗು ಸೇತುವೆ ಶಿಥಿಲಗೊಂಡಿರುವ ವಿಷಯ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಜಿಲ್ಲಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.
ತೂಗುಸೇತುವೆ ದುರಸ್ತಿ ಕಾರ್ಯ ಮುಗಿಯುವವರೆಗೆ ಈ ನಿಷೇಧಾಜ್ಞೆ ಮುಂದುವರಿಯಲಿದ್ದು, ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಮತ್ತು ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಗುಜರಾತ್‌ನಲ್ಲಿ ಇತ್ತೀಚಿಗೆ ನಡೆದ ಮೊರ್ಬಿ ಸೇತುವೆ ದುರಂತದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.